ನ.21ರಂದು ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

pppppppppp
Published on



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಸಮ್ಮೇಳನವನ್ನು ನ.21ರಂದು ಬೆಳಗ್ಗೆ 10ಕ್ಕೆ ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಪತ್ರಕರ್ತರಿಗೆ ಕಿಟ್ ವಿತರಿಸಲಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆ , ಡಾ. ವೈ .ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ , ಹರೀಶ್ ಪೂಂಜ ಹಸಿರು ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ರಿಂದ ಹಿರಿಯ ಪತ್ರಕರ್ತ ಅರವಿಂದ ನಾವಡ ಅವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಪತ್ರಿಕೋದ್ಯಮ -ಹೊಸ ಆಯಾಮ ವಿಷಯದ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. ಪತ್ರಕರ್ತರಾದ ಬಿ. ರವೀಂದ್ರ ಶೆಟ್ಟಿ ಮತ್ತು ಹರ್ಷ ವಿಷಯ ಮಂಡನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಮಧ್ಯಾಹ್ನ 1 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ರಿಂದ ಪ್ರತಿನಿಧಿ ಸಮ್ಮೇಳನ ನಡೆಯಲಿದೆ. ಮಧ್ಯಾಹ್ನ 3ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.
ಮಂಗಳೂರು ವಿ.ವಿ.ಕುಲಪತಿ ಜಯರಾಜ್ ಅಮೀನ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಸಮ್ಮೇಳನದ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ , ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net