

ಹಾವೇರಿ: ಜಿಲ್ಲಾ ಪಂಚಾಯಿತಿಯ ಹಾಲಿ ಅಧ್ಯಕ್ಷರಾಗಿದ್ದ ಬಸನಗೌಡ ದೇಸಾಯಿ(50) ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಇತ್ತೀಚೆಗೆ ಕರೊನಾ ಸೋಂಕು ತಗುಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಿಸದ ಪರಿಣಾಮ ಬೆಂಗಳೂರ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಫೆಬ್ರುವರಿ 15ರಂದು ಜಿಪಂ ಅಧ್ಯಕ್ಷರಾಗಿ ಬಸನಗೌಡ ದೇಸಾಯಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಶಿಗ್ಗಾಂವಿ ತಾಲೂಕು ದುಂಡಸಿ ಜಿಪಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾಗಿದ್ದರು. ಪ್ರಥಮ ಬಾರಿ ದುಂಡಸಿ ಕ್ಷೇತ್ರದಿಂದ ಜಿಪಂ ಸದಸ್ಯರಾಗಿ ಆಯ್ಕೆಯಾಗಿ, ನಂತರ ಅಧ್ಯಕ್ಷ ಗಾದಿಗೂ ಏರಿದ್ದರು. ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.