

ಮಂಗಳೂರು : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಸಹಪಾಠಿ ಹಿಂದು ವಿದ್ಯಾರ್ಥಿನಿಯ ವಿಡಿಯೋ ನಡೆಸಿದ ಪ್ರಕರಣದ ಸಮಗ್ರ ತನಿಖೆಗೆ ಪ್ರತ್ಯೇಕ ತಂಡ ರಚಿಸಬೇಕೆಂದು ದ.ಕ.ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ಉಡುಪಿ ಪೊಲೀಸರು ಹಾಗೂ ಜಿಲ್ಲಾಡಳಿತದ ಬಗ್ಗೆ ನಮಗೆ ವಿಶ್ವಾಸವಿಲ್ಲ. ಪ್ರತ್ಯೇಕ ತನಿಖಾ ತಂಡ ರಚನೆಗೆ ಆಗ್ರಹಿಸಿ ಜು.31ರಂದು ಬೆಳಗ್ಗೆ 10.30ಕ್ಕೆ ನಗರದ ಪುರಭವನ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಕರಣ ಬೆಳಕಿಗೆ ಬಂದ ತಕ್ಷಣ ಆರೋಪಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹಿಸಿತ್ತು. ಆದರೆ ಪೊಲೀಸ್ ಇಲಾಖೆ ಮೃದು ಧೋರಣೆ ತಳೆಯಿತು. ಬಿಜೆಪಿಯ ಆಗ್ರಹ ಮತ್ತು ಮಾಧ್ಯಮಗಳಲ್ಲಿ ಪ್ರಕರಣ ಹೈಲೆಟ್ ಆದ ಬಳಿಕ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಗಂಭೀರ ಪ್ರಕರಣದ ಬಗ್ಗೆ ಸರಕಾರ ಮೃದು ಧೋರಣೆ ತಳೆದು ಒಂದು ಸಮುದಾಯದ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದರು.