

ಮಂಗಳೂರು: ನಗರದ ಜುವೆಲರಿ ಅಂಗಡಿಗೆ ನುಗ್ಗಿ ಸೇಲ್ಸ್‌ಮ್ಯಾನ್‌ನ್ನು ಹತ್ಯೆಗೈದಿದ್ದ ಆರೋಪಿ ಶಿಫಾಸ್ ಮಂಗಳೂರು ಮಾತ್ರವಲ್ಲದೆ ತಮಿಳುನಾಡು, ಕೇರಳ, ಗೋವಾದಲ್ಲಿಯೂ ಇದೇ ರೀತಿಯ ಕೃತ್ಯ ನಡೆಸುವ ಉದ್ದೇಶದಿಂದ ಓಡಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಇಲ್ಲಿ ನಡೆದಿರುವ ಕೃತ್ಯದ ಮಾದರಿಯಲ್ಲಿ ಬೇರೆ ರಾಜ್ಯಗಳಲ್ಲಿ ನಡೆದಿದ್ದರೆ ಅದರ ಮಾಹಿತಿ ನೀಡುವಂತೆ ಅಲ್ಲಿನ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಆರೋಪಿಯ ಪತ್ತೆ ಸವಾಲಾಗಿತ್ತು. ಆತನ ಮುಖಚರ್ಯೆ ಸ್ಪಷ್ಟವಾಗಿ ಯಾವುದೇ ಸಿಸಿ ಕೆಮರಾದಲ್ಲಿ ದಾಖಲಾಗಿರಲಿಲ್ಲ. ಹಾಗಾಗಿ ಆತನ ಚಹರೆ, ಸಿಸಿ ಕೆಮರಾದಲ್ಲಿ ದಾಖಲಾಗಿದ್ದ ಚಿತ್ರಗಳನ್ನು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಾರ್ವಜನಿಕರಿಂದ ಮಾಹಿತಿ ಕೋರಲಾಗಿತ್ತು. ಇದನ್ನು ಗಮನಿಸಿದ ಕಾಸರಗೋಡಿನ ಪೊಲೀಸರು ಓರ್ವ ಶಂಕಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ಮಾಹಿತಿ ನೀಡಿದ್ದರು. ಆತ ಧರಿಸಿದ್ದ ಬ್ಯಾಗ್‌ನ ಆಧಾರದಲ್ಲಿ ಗುರುತು ಪತ್ತೆ ಮಾಡಿದ್ದರು. ಬಳಿಕ ಮಂಗಳೂರು ಪೊಲೀಸರು ವಿಚಾರಿಸಿದಾಗ ಆತನೇ ಆರೋಪಿ ಎಂಬುದು ಗೊತ್ತಾಗಿದೆ ಎಂದು ಆಯುಕ್ತರು ತಿಳಿಸಿದರು.