

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಸರ್ಕಾರ ನೇಮಿಸಿದೆ.
ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಸರ್ಕಾರ, ಕರ್ನಾಟಕ ರಾಜ್ಯ ಹಿಂದುಳಿವ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ ಎಂದು ತಿಳಿಸಿದೆ.
ಉಡುಪಿ ಜಿಲ್ಲೆ ಕುಂದಾಪುರದ ಕೊರ್ಗಿಯವರಾದ ಕೆ. ಜಯಪ್ರಕಾಶ್ ಹೆಗ್ಡೆ, ಉಡುಪಿಯು ಅವಿಭಜಿತ ದಕ್ಷಿಣಕನ್ನಡದಿಂದ ವಿಭಜನೆಗೊಂಡು ಪ್ರತ್ಯೇಕ ಜಿಲ್ಲೆ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಬ್ರಹ್ಮಾವರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದ ಜಯಪ್ರಕಾಶ್ ಹೆಗ್ಡೆ, ಬಂದರು ಹಾಗೂ ಮೀನುಗಾರಿಕಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಬಳಿಕ ಕಾಂಗ್ರೆಸ್ಗೆ ಸೇರಿದ್ದರು. ಉಡುಪಿ-ಚಿಕ್ಕಮಗಳೂರು ಸಂಸದರಾಗಿಯೂ ಆಯ್ಕೆ ಆಗಿದ್ದರು. ನಂತರ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.