

ತ್ಯಾಗರ್ತಿ: ಬಂಡಾಯ ಬಾವುಟ ಹಾರಿಸಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶನಿವಾರ ತ್ಯಾಗರ್ತಿ ಹಾಗೂ ನೀಚಡಿ ಭಾಗದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಬಳಿ ತಮಗಾದ ಅನ್ಯಾಯ ಹಾಗೂ ಕುಟುಂಬ ರಾಜಕಾರಣದಿಂದ ಬಿಜೆಪಿ ಉಳಿಸಲು ಬಿಎಸ್‌ವೈ ಕುಟುಂಬದ ಕಪಿಮುಷ್ಠಿಯಿಂದ ಪಕ್ಷವನ್ನು ಹೊರಗೆ ತರಬೇಕು ಎಂದಿದ್ದಾರೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಕುರಿತು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಕಾರ್ಯಕರ್ತರು ಈಶ್ವರಪ್ಪ ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ನೀಚಡಿಯಲ್ಲಿ ಬಿಜೆಪಿ ಮುಖಂಡರು ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮತ್ತೊಮ್ಮೆ ಆಲೋಚನೆ ಮಾಡಬೇಕೆಂದು ಕಿವಿಮಾತು ಹೇಳಿದ್ದಾರೆ. ವಕೀಲ ಅಶೋಕ್ ಜಿ ಭಟ್, ಸಾಗರ ನಗರಸಭೆ ಮಾಜಿ ಸದಸ್ಯ ಮಂಜುನಾಥ್ ಇತರರಿದ್ದರು.
ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಲಾಗಿದೆ. ಸಾವಿರಾರು ಕಾರ್ಯಕರ್ತರು ಬೆಂಬಲಕ್ಕೆ ನಿಂತಿದ್ದಾರೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಚುನಾವಣೆಯಲ್ಲಿ ಗೆಲುವು ನಿಶ್ಚಿತ.ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ