

ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜ.13ರಂದು ಮಂಡ್ಯ ನಗರ ವ್ಯಾಪ್ತಿಯ 19 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆ ನಡೆಸಲಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡದೆ ಶಿಸ್ತುಬದ್ಧವಾಗಿ ನಡೆಯುವಂತೆ ಅಧಿಕಾರಿಗಳು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಪರೀಕ್ಷೆ ಜಿಲ್ಲೆಯ 19 ಕೇಂದ್ರಗಳಲ್ಲಿ ನಡೆಯಲಿದೆ. 7,779 ಪರೀಕ್ಷಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪತ್ರಿಕೆ-1 ಬೆಳಗ್ಗೆ 10 ಗಂಟೆಯಿಂದ 11 ಹಾಗೂ ಪತ್ರಿಕೆ-2 ಮಧ್ಯಾಹ್ನ 12 ಗಂಟೆಯಿಂದ 2 ರವರೆಗೆ ನಡೆಯಲಿದೆ ಎಂದರು.
ಅಭ್ಯರ್ಥಿಗಳು ಕೇಂದ್ರದ ಒಳಗೆ ಪ್ರವೇಶಿಸಿದ ನಂತರ ಎರಡು ಪತ್ರಿಕೆಗಳ ಪರೀಕ್ಷೆ ಮುಗಿದ ನಂತರ ಮಾತ್ರ ಹೊರಗೆ ಹೋಗಲು ಅವಕಾಶವಿರುತ್ತದೆ. ಅಂತೆಯೇ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಸ್ಟ್ ತರುವುದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಎಲ್ಲ ಸೂಚನೆಗಳನ್ನು ಪಲಿಸಬೇಕು. ಮಾತ್ರವಲ್ಲದೆ ವಸ್ತ್ರ ಸಂಹಿತೆಯನ್ನು ಅನುಸರಿಸಬೇಕು. ಪ್ರತಿ ಕೇಂದ್ರಕ್ಕೆ ಒಬ್ಬರು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗೆ ತ್ರಿಸದಸ್ಯರನ್ನೊಳಗೊಂಡ 6 ಮಾರ್ಗಾಧಿಕಾರಿಗಳ ತಂಡ ರಚಿಸಲಾಗಿದೆ. ವೀಕ್ಷಕರು ಹಾಗೂ ಪರೀಕ್ಷೆಗೆ ನಿಯೋಜಿಸಲಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿ ಪರೀಕ್ಷಾ ಪ್ರಾಧಿಕಾರ ಕಾಲಕಾಲಕ್ಕೆ ನೀಡಲಾಗುವ ಸಲಹೆ ಹಾಗೂ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಡಿಡಿಪಿಯು ಚಲುವಯ್ಯ, ಅಧೀಕ್ಷಕ ರಾಜೇಗೌಡ, ಉಪತಹಸೀಲ್ದಾರ್ ವಸಂತಕುಮಾರ್, ಪೌರಾಯುಕ್ತ ಆರ್.ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಹೇಮಾವತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ, ಡಿಡಿಪಿಐ ಎಚ್.ಶಿವರಾಮೇಗೌಡ ಇತರರಿದ್ದರು.