

ಮಂಡ್ಯ: ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಸೆ.11ರಂದು ಸಂಜೆ 4ಗಂಟೆಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಬದುಕು, ಸಾಧನೆ, ಹೋರಾಟ ಕುರಿತು ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಕದಂಬ ಸೈನ್ಯದ ಸಂಸ್ಥಾಪಕ ಬೇಕ್ರಿ ರಮೇಶ್ ಹೇಳಿದರು.
ಅಂದಿನ ಕಾರ್ಯಕ್ರಮದ ಸಾನಿಧ್ಯವನ್ನು ನಾಡೋಜ ಡಾ.ಭಾಷ್ಯಂ ಸ್ವಾಮೀಜಿ ವಹಿಸಲಿದ್ದು, ಇತಿಹಾಸ ತಜ್ಞ ಜಿ.ಸಿ.ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ. ನರರೋಗ ಮತ್ತು ಮಾನಸಿಕ ರೋಗ ತಜ್ಞ ಡಾ.ಸತ್ಯನಾರಾಯಣರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂತೆಯೇ ಐವರಿಗೆ ಕಂದಬರತ್ನ ಹಾಗೂ ಆರು ಜನರಿಗೆ ಕದಂಬಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವರ್ಷ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬರಲಿಲ್ಲ. ಪರಿಣಾಮ ಕೆಆರ್‌ಎಸ್ ಡ್ಯಾಂನಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗಲಿಲ್ಲ. ಆದಾಗ್ಯೂ ರಾಜ್ಯಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜಿಲ್ಲೆಯ ಜನರಿಗೆ ದ್ರೋಹವೆಸಗಿದೆ. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12ಗಂಟೆಗೆ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿದ್ದರೂ ಸಂಸದರು, ಚಿತ್ರರಂಗದ ಕಲಾವಿದರು ನಿರ್ಲಕ್ಷೃ ವಹಿಸುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸಂಚಾಲಕ ಎಸ್.ಶಿವಕುಮಾರ್, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಸದಸ್ಯರಾದ ಆರಾಧ್ಯ ಗುಡಿಗೇನಹಳ್ಳಿ, ಥಾಮಸ್ ಬೆಂಜಮಿನ್ ಕಿಟ್ಟಿ, ಜಿಲ್ಲಾ ಉಪಾಧ್ಯಕ್ಷ ರಾಮು, ಮುಖಂಡ ಕೃಷ್ಣ ಇದ್ದರು.