ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಿ.ಎಸ್. ರಾಮಸ್ವಾಮಿ ಆಯ್ಕೆ

rangaswami new
Published on

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ ನೀಡಲಾಗುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಲೇಖಕ ಅರಸೀಕರೆ ಡಿ.ಎಸ್. ರಾಮಸ್ವಾಮಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಆಯ್ಕೆ ಸಮಿತಿ ಡಿ.ಎಸ್. ರಾಮಸ್ವಾಮಿ ಅವರ ಮೀನು ಬೇಟೆಗೆ ನಿಂತ ದೋಣಿ ಸಾಲು ಅಪ್ರಕಟಿತ ಕವನ ಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, 10 ಸಾವಿರ ರೂ. ನಗದು ಸಹಿತ ಪ್ರಶಸ್ತಿ ಫಲಕ ನೀಡಲಾಗುತ್ತದೆ. ಕವಿ, ಕಾದಂಬರಿಕಾರ, ನಾಟಕಕಾರ, ಕಥೆಗಾರ, ಪತ್ರಿಕೋದ್ಯಮಿಯಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಹೆಸರುವಾಸಿಯಾದ ಕಡೆಂಗೋಡ್ಲು ಶಂಕರ ಭಟ್ಟರ ಹೆಸರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಡಿ.ಎಸ್. ರಾಮಸ್ವಾಮಿ ಅವರು ತರೀಕೆರೆ ಮೂಲದವರಾಗಿದ್ದು, ಪ್ರಸ್ತುತ ಅರಸೀಕೆರೆ ಭಾರತೀಯ ಜೀವ ವಿಮಾ ನಿಗಮದಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿವಿಧ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುವ ಇವರ ಅಂಡಮಾನ್ ಕುರಿತ ಪ್ರವಾಸ ಕಥನ ಧಾರಾವಾಹಿಯಾಗಿ ಪ್ರಸಾರಗೊಂಡಿತ್ತು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಡಿ.ಸಿ ಅನಂತಸ್ವಾಮಿ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಪ್ರೊ.ಜಿ.ಎಸ್. ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಮುದ್ದಣ ಕಾವ್ಯ ಪ್ರಶಸ್ತಿ ಹಾಗೂ ವಿಭಾಕಾವ್ಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net