

ಕಲಬುರಗಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಅಪಪ್ರಚಾರ ನಡೆಸಿ, ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ಧೋರಣೆ ಖಂಡಿಸಿ ಲೋಕತಂತ್ರ ಬಚಾವೋ, ಅರಾಜಕತಾ ಹಟಾವೋ ಎಂಬ ಬೃಹತ್ ಅಭಿಯಾನದ ನಿಮಿತ್ತ ನಗರದಲ್ಲಿ ನ.25ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಗುವುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ಮತ್ತು ವಿಭಾಗ ಉಸ್ತುವಾರಿ ಅರುಣ ಶಹಾಪುರ ಹೇಳಿದರು.
25ರಂದು ಮಧ್ಯಾಹ್ನ 3ಕ್ಕೆ ನಗರದ ನಗರೇಶ್ವರ ಶಾಲಾ ಆವರಣದಿಂದ ಬೃಹತ್ ಪಾದಯಾತ್ರೆ ಆರಂಭವಾಗಲಿದ್ದು, ಜಗತ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ. ರಕ್ಷಣಾ ಸಚಿವ ರಾಜನಾಥ್ಸಿಂಗ್ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಹಲವು ರಾಜ್ಯಮಟ್ಟದ ನಾಯಕರು, ಸಂಸದರು, ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದೇಶದ 25 ಸ್ಥಳಗಳಲ್ಲಿ ರಾಷ್ಟ್ರ ಮಟ್ಟದ ನಾಯಕರ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಕಲಬುರಗಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ನಗರದ ನಡೆಯಲಿರುವ ಪಾದಯಾತ್ರೆಯಲ್ಲಿ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.
ಹಿಂದೆಯೂ ದೇಶದಲ್ಲಿ ಒಂಬತ್ತು ಬಾರಿ ಎಸ್ಐಆರ್ ಪ್ರಕ್ರಿಯೆ ನಡೆದಿದ್ದು, ಇದೀಗ ಕೇಂದ್ರ ಚುನಾವಣಾ ಆಯೋಗ ಈ ಪ್ರಕ್ರಿಯೆಯನ್ನು ನಡೆಸುತ್ತಿದೆ. ಆದರೆ, ಕಾಂಗ್ರೆಸ್ ಎಸ್ಐಆರ್ ಕುರಿತು ಅನಗತ್ಯ ಆರೋಪಗಳನ್ನು ಮಾಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್, ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲಕೂರ, ದತ್ತಾತ್ರೇಯ ಪಾಟೀಲ್ ರೇವೂರ್, ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ, ನಗರ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ್, ಶಿವಯೋಗಿ ನಾಗನಹಳ್ಳಿ, ಮಹಾದೇವ ಬೆಳಮಗಿ, ಶಿವರಾಜ ಪಾಟೀಲ್ ರದ್ದೇವಾಡಗಿ, ಶೋಭಾ ಬಾಣಿ, ಚಂದ್ರಶೇಖರ ಪರಸರೆಡ್ಡಿ ಇತರರಿದ್ದರು.