

ಇಳಕಲ್ಲ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಲು ಶಿಕ್ಷಕರು ಶ್ರಮಿಸಬೇಕು. ಪ್ರತಿಭಾ ಕಾರಂಜಿಯಂಥ ಸೂಕ್ತ ವೇದಿಕೆಯಲ್ಲಿ ಮಕ್ಕಳು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಕರಡಿ ವಲಯದ ಶಿಕ್ಷಣ ಸಂಯೋಜಕ ಈಶ್ವರ ಅಂಗಡಿ ಹೇಳಿದರು.
ಸಮೀಪದ ತುಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಘಟಕದ ಕಾರ್ಯದರ್ಶಿ ಗುಂಡಪ್ಪ ಕುರಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಸಮೂಹ ಸಂಪನ್ಮೂಲ ಅಧಿಕಾರಿ ಪರಶುರಾಮ ಹಡಗಲಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಸದಸ್ಯ ಸಂಗಣ್ಣ ಬಂಗಾರಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಎ.ಎಚ್.ಐನೂರ ಅಧ್ಯಕ್ಷತೆ ವಹಿಸಿದ್ದರು.
ಕ್ಲಸ್ಟರ್‌ನ 14 ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯಶಿಕ್ಷಕರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ಅನುಶ್ರೀ ಹಾಗೂ ಪಾರ್ವತಿ ಪ್ರಾರ್ಥಿಸಿದರು. ಟಿ.ಆರ್.ಚಿತ್ತರಗಿ ಸ್ವಾಗತಿಸಿದರು. ಎಸ್.ಜಿ.ಬಂಗಾರಿ ಪ್ರಾಸ್ತಾವಿಕ ಮಾತನಾಡಿದರು. ಎಂ.ಎನ್.ತುಪ್ಪದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.