ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧ

BLY-17-2
ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಕಿರು ಹೊತ್ತಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಬಿಡುಗಡೆಗೊಳಿಸಿದರು.
Published on

ಬಳ್ಳಾರಿ : ಕಲ್ಯಾಣ ಕರ್ನಾಟಕ ಭಾಗವನ್ನು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಳಿಸಲು, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಶ್ರಮಿಸಿದ ಎಲ್ಲ ಮಹನೀಯರನ್ನು ಮರೆಯಬಾರದು. ಅವರ ತ್ಯಾಗ, ಬಲಿದಾನಗಳ ಸ್ಮರಣೆ ಮುಂದಿನ ಪೀಳಿಗೆಗೂ ಅಗತ್ಯ ಇದೆ ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅಭಿಪ್ರಾಯಪಟ್ಟರು.

ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಸಂಯುಕ್ತಾಶ್ರಯದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತವು 1947ರ ಆಗಸ್ಟ್ 15 ರಂದು ಸ್ವಾತಂತ್ರ್ಯಗೊಂಡರೂ ಹೈದರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ಬಳ್ಳಾರಿ ಪ್ರದೇಶಗಳು ಸ್ವತಂತ್ರವಾಗಲು ಒಂದು ವರ್ಷ ಕಾಲ ಕಾಯಬೇಕಾಯಿತು. ಆ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳ ಪ್ರಗತಿ ಶೂನ್ಯದ ಕಡೆಗೆ ಹೆಜ್ಜೆ ಇಡುವಂತಾಗಿತ್ತು. ಈ ಭಾಗದ ಜನರಲ್ಲಿ ಹೋರಾಟಕ್ಕೆ ಧೈರ್ಯ ತುಂಬಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರು, ಸಾಮಾಜಿಕ ಚಳವಳಿಯ ಸುಧಾರಕರು ಹಾಗೂ ಮತ್ತಿತರ ಸಂಘ ಸಂಸ್ಥೆಗಳು ಹಾಗೂ ಹೋರಾಟಕ್ಕೆ ಇಳಿದು ಶ್ರಮಿಸಿದ ಎಲ್ಲ ಮಹನೀಯರನ್ನು ನಾವು ಇಂದು ಸ್ಮರಿಸಬೇಕಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಹಿತ ದೃಷ್ಟಿಯಿಂದ ಸಂವಿಧಾನ ತಿದ್ದುಪಡಿ ಕಾಯ್ದೆಯಲ್ಲಿ 371(ಜೆ) ಜಾರಿಗೆ ತರಲಾಯಿತು. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸಾಧ್ಯವಾಗಿದೆ. ಅಂದಿನ ನಮ್ಮ ಸರ್ಕಾರ 2013ರಲ್ಲಿ ನ.06 ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಿದ್ದು, ಇದು ಈ ಭಾಗದ 40 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೂ ಸೇರಿದಂತೆ, ಎಲ್ಲ ಭಾಗಗಳ ಮೂಲ ಸೌಕರ್ಯ, ಆರೋಗ್ಯ, ಸಾಮಾಜಿಕ, ರಸ್ತೆ ಸಂಪರ್ಕ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸುವುದಕ್ಕೆ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು. ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಬಿ.ಜಾನಕಿ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net