

ಮಂಡ್ಯ: ಜಿಲ್ಲಾ ಸಹಕಾರ ಕೇಂದ್ರ(ಎಂಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ ನಾಮ ನಿರ್ದೇಶಕರಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ ಅವರನ್ನು ನೇಮಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಇದೇ ಸ್ಥಾನಕ್ಕೆ ನೇಮಕವಾಗಿದ್ದ ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಅವರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ. ಅದರಂತೆ ತೆರವಾದ ಸ್ಥಾನಕ್ಕೆ ತಾಲೂಕಿನ ಬಸರಾಳು ಹೋಬಳಿಯ ಕಂಬದಹಳ್ಳಿ ಪುಟ್ಟಸ್ವಾಮಿ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ಜಾರಿಗೆ ಬರುವಂತೆ ನಾಮ ನಿರ್ದೇಶನ ಮಾಡಿ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ರಂಗನಾಥ ಆ.21ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ನೂತನ ನಾಮನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಅವರು ಗುರುವಾರ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರನ್ನು ನಗರದ ಶಾಸಕರ ಕಚೇರಿಯಲ್ಲಿ ಹೂ ಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್.ಬಿ.ರಾಮು, ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಇದ್ದರು.