18ರಂದು ಕನಕ ಜಯಂತಿ ಆಚರಣೆ

Oplus_131072
Oplus_131072
Published on

ಯಳಂದೂರು : ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕನಕ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಲೂಕು ಆಡಳಿತದ ವತಿಯಿಂದ ನ.18ರಂದು ಅರ್ಥಪೂರ್ಣವಾಗಿ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

ಬೆಳಗ್ಗೆ 9 ಗಂಟೆಗೆ ತಾಲೂಕು ಆಡಳಿತದಿಂದ ಅಲಂಕೃತ ಬೆಳ್ಳಿ ರಥದಲ್ಲಿ ಕನಕದಾಸರ ಭಾವಚಿತ್ರವನ್ನು ಗೊರವರ ಕುಣಿತ, ನಂದಿಕಂಬ, ವೀರಗಾಸೆ, ಮಂಗಳವಾದ್ಯ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಪಟ್ಟಣ ಷಡಕ್ಷರಿ ದೇವರ ಗದ್ದುಗೆಯಿಂದ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚೆಯಾಯಿತು.

ಎಲ್ಲ ಕಾರ್ಯಕ್ರಮಗಳಲ್ಲೂ ತಪ್ಪದೆ ಎಲ್ಲ ಇಲಾಖೆಯ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಜಯಪ್ರಕಾಶ್ ಸೂಚನೆ ನೀಡಿದರು.

ಕಾರ್ಯಕ್ರಮಕ್ಕೆ ತಾಲೂಕು ಕನಕದಾಸ ಸಂಘದ ಪದಾಧಿಕಾರಿಗಳು ಹಾಗೂ ಕುರುಬ ಜನಾಂಗ ಸೇರಿದಂತೆ ಇತರ ಸಂಘ, ಸಂಸ್ಥೆಗಳು, ಪ್ರಗತಿಪರ ಸಂಘಟನೆಗಳ ಸದಸ್ಯರು, ಕನ್ನಡಪರ ಸಂಘಟನೆಗಳ ಸದಸ್ಯರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಜಯಪ್ರಕಾಶ್ ಮನವಿ ಮಾಡಿದರು.

ಪಪಂ ಅಧ್ಯಕ್ಷೆ ಲಕ್ಷ್ಮೀಮಲ್ಲು, ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ್, ನಾಮನಿರ್ದೇಶಿತ ಸದಸ್ಯ ಲಿಂಗರಾಜಮೂರ್ತಿ, ಮುನವ್ವರ್‌ಬೇಗ್, ಮುಖ್ಯಾಧಿಕಾರಿ ಮಹೇಶ್‌ಕುಮಾರ್, ಬಿಇಒ ಮರಯ್ಯ, ಕನಕದಾಸ ಸಂಘದ ಅಧ್ಯಕ್ಷ ಕೊಂಡೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net