

ಮೈಸೂರು: ಸಂತ ಕವಿ ಕನಕದಾಸ ಜಯಂತಿಯನ್ನು ನ.18ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ತಿಳಿಸಿದರು.
ಕನಕದಾಸ ಜಯಂತಿ ಆಚರಣೆಯ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇಡೀ ಜಗತ್ತಿಗೆ ಆದರ್ಶಗಳಿಂದ ಮಾದರಿಯಾಗಿರುವ ಕನಕದಾಸರ ಜಯಂತಿಯನ್ನು ರಾಜ್ಯದ ಇತರ ಜಿಲ್ಲೆಗಳಿಗಿಂತ ಮೈಸೂರಿನಲ್ಲಿ ವಿಜೃಂಭಣೆಯಿಂದ ಆಚರಿಸುವುದು ನಮ್ಮ ಕರ್ತವ್ಯ ಹಾಗೂ ಪುಣ್ಯದ ಕೆಲಸವಾಗಿದೆ ಎಂದರು.
ಸರ್ಕಾರದ ಶಿಷ್ಟಾಚಾರದಂತೆ ಜಯಂತಿಯನ್ನು ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ನಗರಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಂತ ಕವಿ ಶ್ರೀ ಕನಕದಾಸ ಜಯಂತಿ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮಾತನಾಡಿ, ಹಲವು ವರ್ಷಗಳಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಕಳೆದ 10 ವರ್ಷಗಳಿಂದ ಬಹಳ ವಿಜೃಂಭಣೆಯಿಂದ ಮೈಸೂರು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳಿಂದ ಪ್ರದರ್ಶನ ಹಾಗೂ ಸ್ತಬ್ಧಚಿತ್ರಗಳ ಮೆರವಣಿಗೆ ಮಾಡುವ ಮೂಲಕ ಜಯಂತಿಯ ಮೆರುಗು ಹೆಚ್ಚಿಸಲಾಗುವುದು ಎಂದರು.
ನಗರದ ಕಲಾಮಂದಿರದಲ್ಲಿ ನ.18 ಮತ್ತು 19 ರಂದು ಜಯಂತಿ ಆಚರಿಸಲಾಗುವುದು. ನ.18 ರಂದು ಬೆಳಗ್ಗೆ 9.30ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಗೊಳ್ಳಲಿದೆ. ಮೆರವಣಿಗೆಯಲ್ಲಿ 5 ಟ್ಯಾಬ್ಲೋಗಳ ಪ್ರದರ್ಶನ ಸೇರಿದಂತೆ 20 ಕಲಾ ತಂಡಗಳಿಂದ ವಿವಿಧ ಕಲೆಗಳ ಪ್ರದರ್ಶನ ನಡೆಯಲಿದೆ. ನ.19 ರಂದು ಸಂಜೆ ಕಲಾಮಂದಿರದಲ್ಲಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳಿಗೆ ಸನ್ಮಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಗೀತ ಗಾಯನವನ್ನು ಏರ್ಪಡಿಸಲಾಗುವುದು. ಸರ್ಕಾರದ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.
ಮುಖಂಡರಾದ ಕೆ.ಆರ್.ಮೋಹನ್‌ಕುಮಾರ್‌ಗೌಡ, ಎಂ.ಶಿವಣ್ಣ, ಯಮುನಾ, ಕುರುಬರ ಸಂಘದ ಸುಬ್ರಹ್ಮಣ್ಯ, ಬಾನು ಮೋಹನ್ ಇತರರು ಇದ್ದರು.