

ಮಡಿಕೇರಿ: ಕನಕದಾಸರ ಜಯಂತಿಯನ್ನು ನ.೩೦ ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯ ಗಾಂಧಿ ಭವನದಲ್ಲಿ ಕನಕದಾಸರ ಜಯಂತಿಯನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತವಾಗಿ ಆಯೋಜಿಸಲಾಗುವುದು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಉಪನ್ಯಾಸಕರ ಹೆಸರನ್ನು ತಿಳಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಕನಕ ಗುರುಪೀಠ ಮತ್ತು ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸುವಂತಾಗಬೇಕು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ೨೫ ಸೆಂಟು ಜಾಗ ಗುರುತಿಸುವಂತಾಗಬೇಕು. ಮುಖ್ಯಮಂತ್ರಿರವರು ಜನವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಆ ಸಂದರ್ಭದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವಂತಾಗಲು ಅವಕಾಶ ಮಾಡಬೇಕು ಎಂದು ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕುಶಾಲನಗರ ಸುತ್ತಮುತ್ತ ಜಾಗ ಗುರುತಿಸುವಂತಾಗಲು ತಹಶೀಲ್ದಾರರ ಜತೆ ಚರ್ಚಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ಕುಶಾಲನಗರದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡಬೇಕು ಎಂದು ಕೋರಿದರು.
ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಗಂಗಾಧರ ಮಾತನಾಡಿ, ಸಮಾಜದ ಹಿರಿಯರಿಗೆ ಸನ್ಮಾನಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ/ ನೀಟ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಎಚ್.ಎಸ್.ಮಹೇಶ್, ಉಪಾಧ್ಯಕ್ಷ ಟಿ.ಕೆ.ವಸಂತ, ಖಜಾಂಜಿ ಶಿವಣ್ಣ ಕನಕದಾಸ ಜಯಂತಿ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು. ಪ್ರಮುಖರಾದ ಭರಮಣ್ಣ, ರವಿಗೌಡ, ಎಂ.ಟಿ.ಗಣೇಶ್ ಇತರರು ಇದ್ದರು.