

ಕನಕಗಿರಿ: ವಸತಿ ಶಾಲೆಗಳ ಆಯ್ಕೆಗೆ ನಡೆಸುವ ಪರೀಕ್ಷೆಗಳಿಗೆ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ರೀತಿಯಲ್ಲಿ ಆಯ್ಕೆಯಾಗಲು ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳು ಸಹಕಾರಿಯಾಗಿವೆ ಎಂದು ಹುಲಿಹೈದರ ಕ್ಲಸ್ಟರ್‌ನ ಸಿಆರ್‌ಪಿ ಶಿವಪ್ಪ ಹೆಳವರ ಹೇಳಿದರು.
ತಾಲೂಕಿನ ಹುಲಿಹೈದರ ಚನ್ನದಾಸರ ಓಣಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿದ್ದು, ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಕಡೆ ವಸತಿ ಶಾಲೆಗಳನ್ನು ಆರಂಭಿಸಿದ್ದು, ಇವುಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ ವಸತಿ ಶಾಲೆಗಳಿಗೆ ಆಯ್ಕೆಯಾಗಲು 5ನೇ ತರಗತಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಅದಕ್ಕಾಗಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಬಸವರಾಜ್ ಐಲಿ, ಮುಖ್ಯಶಿಕ್ಷಕ ಬಾಲಾಜಿ, ಹುಸೇನ್‌ಸಾಬ್, ಅತಿಥಿ ಶಿಕ್ಷಕ ಪರಶುರಾಮ್ ಇದ್ದರು.