

ಕನಕಗಿರಿ: ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಸ್‌ಎಫ್‌ಐ ಸಂಘಟನೆಯು ತಾಲೂಕಿನ ನವಲಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಪ್ರಕಾಶ ಸವಡಿ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿತು.
ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ, ಪಪಂ ಸಮುದಾಯದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.60 ರಿಂದ 74.99 ಫಲಿತಾಂಶದೊಂದಿಗೆ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 7 ಸಾವಿರ ರೂ. ಪ್ರೋತಾಹಧನ ನೀಡುತ್ತಿದ್ದದನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವರ್ಷದಲ್ಲಿ ರದ್ದು ಮಾಡಲಾಗಿದೆೆ.
ಎಸ್ಸಿಪಿ ಟಿಎಸ್‌ಪಿ ಯೋಜನೆಗಾಗಿ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ ಎಂದು ಹೇಳುತ್ತಿರುವ ಸಿಎಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಒಂದು ಬಾರಿ ಇಲಾಖೆಯ ಪರಿಷ್ಕೃತ ಆದೇಶ ನೋಡಿ ಶೋಷಿತ ಸಮುದಾಯಗಳ ಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಯೋಜನೆಗಳನ್ನು ರೂಪಿಸಬೇಕು. ಆದರೆ, ಆ ಯೋಜನೆಗಳಿಗೇ ಕತ್ತರಿ ಪ್ರಯೋಗ ಆಗಿದೆ. ಈ ಆದೇಶದಿಂದ ಪಜಾ, ಪಪಂ ವಿದ್ಯಾರ್ಥಿಗಳ ಮಕ್ಕಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಹಳೆಯ ಆದೇಶವನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ಕಾರ್ಯದರ್ಶಿ ಶಿವಕುಮಾರ್ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಈ ಹಿಂದಿನ ಬಿಜೆಪಿ ಸರ್ಕಾರ 25 ಸಾವಿರ ರೂ.ನಿಂದ 10 ಸಾವಿರ ರೂ.ಗೆ ಕಡಿತಗೊಳಿಸಿತ್ತು. ತಮ್ಮ ಸರ್ಕಾರಕ್ಕೆ ಇದನ್ನು ಸರಿಪಡಿಸುವಂತೆ ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಸರಿಪಡಿಸಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಮುಖಂಡ ಹನುಮೇಶ್ ಮುಕುಂಪಿ, ತಾಲೂಕು ಮುಖಂಡ ಮೌನೇಶ್, ದರ್ಶನ್, ವಿದ್ಯಾರ್ಥಿಗಳಾದ ಚಂದ್ರಪ್ರಸಾದ್, ಮಲ್ಲಿಕಾರ್ಜುನ್, ಚಂದ್ರಶೇಖರ್, ಯಮನೂರಪ್ಪ, ಜಯಲಕ್ಷ್ಮೀ, ಕಲ್ಪನಾ, ಶಾಂತ, ಲಕ್ಷ್ಮೀ, ಚೈತ್ರಾ ಇತರರಿದ್ದರು.