

ಬೆಂಗಳೂರು: ರಾಜ್ಯದ ಪ್ರತಿ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲಾ 5 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಅವುಗಳನ್ನು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ರೂಪಿಸಬೇಕು ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಮನವಿ ಮಾಡಿದೆ.
ಈ ಕುರಿತು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಎಲ್ಲ ಸಚಿವರು ಹಾಗೂ ಶಾಸಕರಿಗೆ ಪತ್ರ ಬರೆದಿದ್ದಾರೆ.
ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯಬಲ್ಲದು. ಹಾಗಾಗಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಬಲಗೊಳಿಸಿ, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರವು ರಾಜ್ಯ ಸರ್ಕಾರಕ್ಕೆ ನಿರಂತರ ಸಲಹೆ ನೀಡುತ್ತಾ ಬಂದಿದೆ. ಆದರೂ, ಕಳೆದ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ತಡೆಯಿಲ್ಲದೆ ಸಾಗುತ್ತಿದೆ ಎಂದು ಹೇಳಿದ್ದಾರೆ. ಶಾಲೆಗಳನ್ನು ದತ್ತು ಪಡೆದು, ಸಬಲೀಕರಣಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಶಾಸಕರು ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.