

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ವಿರುದ್ಧ ವಿವಿಧ ದೂರುಗಳ ಸಲ್ಲಿಕೆ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಆರು ಅಧಿಕಾರಿಗಳ ಸಮಿತಿ ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶಿಸಿದೆ.
ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಶಾಖೆ ಜಂಟಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಬ್ಬರು ಜಂಟಿ ನಿರ್ದೇಶಕರು, ಲೆಕ್ಕಾಧಿಕಾರಿ ಹಾಗೂ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರನ್ನೊಳಗೊಂಡ ಸಮಿತಿ ರಚಿಸಿ 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದ್ದು, ಪರಿಷತ್ತಿನ ಸದಸ್ಯರಿಗೆ ವಿನಾಕಾರಣ ನೋಟಿಸ್ ನೀಡಿ ಕಿರುಕುಳ ನೀಡುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಹಣಕಾಸಿನ ಅವ್ಯವಹಾರ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ತನಿಖೆ ನಡೆಸಿ, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸುವಂತೆ ದೂರುದಾರರು ಆಗ್ರಹಿಸಿದ್ದರು.
ಪರಿಷತ್ತಿಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಿ, ಅಕ್ರಮಗಳ ಬಗ್ಗೆ ಪರಿಶೀಲಿಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ದೂರುಗಳಿಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧಿಕಾರಿಗಳ ಸಮಿತಿಯನ್ನು ರಚಿಸಿಸುವಂತೆಯೂ ದೂರುದಾರರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ಸಮಿತಿ ರಚಿಸಿದೆ.