

ಮೈಸೂರು: ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಬಳಿಕ ಬುಧವಾರ ನಗರದಲ್ಲಿ ಕನ್ನಡ ಕಂಪು ಪಸರಿಸಿತು. ಜಿಲ್ಲಾಡಳಿತ ವತಿಯಿಂದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಅರಮನೆ ಆವರಣದಲ್ಲಿ ಶ್ರೀ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಬಳಿಕ ಓವೆಲ್ ಮೈದಾನದಲ್ಲಿ ಸಿದ್ಧಪಡಿಸಿದ್ದ ವೇದಿಕೆಯಲ್ಲಿ ಶ್ರೀ ಭುವನೇಶ್ವರಿ ದೇವಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಆಕರ್ಷಕ ಪಥ ಸಂಚಲನದಿಂದ ಗೌರವ ವಂದನೆ ಸ್ವೀಕರಿಸಿ, ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು. ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್ ಬ್ಯಾಂಡ್‌ನಿಂದ ರಾಷ್ಟ್ರಗೀತೆ ಮತ್ತು ನಾಡಗೀತೆ ಮೊಳಗಿತು.
ಪೆರೇಡ್‌ನಲ್ಲಿ ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಗರ ನಾಗರಿಕ ಪಡೆ, ಮಹಿಳಾ ಪೊಲೀಸ್ ಪಡೆ, ಅಶ್ವದಳ, ಅಗ್ನಿಶಾಮಕ ದಳ, ಪೊಲೀಸ್ ಬ್ಯಾಂಡ್ ಸೇರಿದಂತೆ 18 ತಂಡಗಳು ಭಾಗಿಯಾಗಿ ಆಕರ್ಷಕ ಪಥ ಸಂಚಲನ ನಡೆಸಿದವು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಜನತೆಗೆ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಕನ್ನಡದ ಬಳಕೆ ಹಾಗೂ ಬೆಳವಣಿಗೆಗೆ ಸರ್ಕಾರ ನೀಡಿರುವ ಸೌಲಭ್ಯಗಳ ಮಾಹಿತಿ ನೀಡಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಆಗಿರುವ ಹಿನ್ನೆಲೆ ಮುಂದಿನ ವರ್ಷದ ನ.1ರವರೆಗೆ ಕನ್ನಡದ ಬೆಳವಣಿಗೆ, ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು…, ರಾಷ್ಟ್ರಕವಿ ಕುವೆಂಪು ಅವರ ಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು…, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ…, ಸಿದ್ದಯ್ಯ ಪುರಾಣಿಕರ ಹೊತ್ತಿತೋ ಹೊತ್ತಿತು ಕನ್ನಡದ ದೀಪ…, ಚೆನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ… ಗೀತೆಗಳನ್ನು ಕಲಾವಿದರಿಂದ ಪ್ರಸ್ತುತಪಡಿಸಲಾಯಿತು.
‘ವಿಜಯವಾಣಿ’ ಉಪ ಸಂಪಾದಕ ದೊಡ್ಡನಹುಂಡಿ ರಾಜಣ್ಣ ಸೇರಿದಂತೆ 50 ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ 17 ಸಾಧಕರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಾಸಕರಾದ ಕೆ.ಹರೀಶ್ ಗೌಡ, ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಚ್.ವಿಶ್ವನಾಥ್, ಸಿ.ಎನ್.ಮಂಜೇಗೌಡ, ಮೇಯರ್ ಶಿವಕುಮಾರ್ ಇತರರಿದ್ದರು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಓವೆಲ್ ಮೈದಾನದವರೆಗೆ ನಡೆದ ಭುವನೇಶ್ವರಿ ದೇವಿಯ ಮೆರವಣಿಗೆ ಗಮನ ಸೆಳೆಯಿತು. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಿದವು. ಪೂಜಾ ಕುಣಿತ, ಡೊಳ್ಳು ಕುಣಿತಾ ಸೇರಿದಂತೆ ವಿವಿಧ ಕಲಾತಂಡಗಳು ಮೆರುಗು ನೀಡಿದವು.