

ಬೆಂಗಳೂರು: ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಿ, ಕಾನೂನು ಬಲ ನೀಡಬೇಕು ಎಂದು ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಸರ್ಕಾರವನ್ನು ಆಗ್ರಹಿಸಿವೆ.
ರಾಜ್ಯ ಸರ್ಕಾರವು ಕರ್ನಾಟಕ ಕೈಗಾರಿಕಾ ನೀತಿಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ವಿಧಿಸಿರುವ ಷರತ್ತುಗಳಿಂದ ಕನ್ನಡಿಗರಿಗೆ ಯಾವುದೇ ಉಪಯೋಗವಾಗಿಲ್ಲ. ಉದ್ದಿಮೆಗಳು ಸ್ಥಾಪನೆಯಾಗಿ, ಕೆಲಸ ಪ್ರಾರಂಭಿಸಲು ಕೆಲವು ವರ್ಷಗಳೇ ಬೇಕಾಗುತ್ತವೆ. ರಾಜ್ಯದಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಉದ್ದಿಮೆ, ಸಂಸ್ಥೆ, ಕಚೇರಿಗಳಲ್ಲಿ ನಿರಂತರ ಉದ್ಯೋಗ ಸೃಷ್ಟಿಯಾಗುತ್ತಿರುತ್ತದೆ. ಅಲ್ಲಿನ ನೇಮಕಾತಿಯಲ್ಲಿ ಕನ್ನಡಿಗರಿಗೆ ನ್ಯಾಯಯುತ ಪಾಲು ದೊರೆಯಲು, ಕನ್ನಡಿಗರ ಉದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವಂತಾಗಲು ಪರಿಷ್ಕೃತ ಮಹಿಷಿ ವರದಿಯನ್ನು ಸದನದಲ್ಲಿ ಮಂಡಿಸಿ, ಕಾಯ್ದೆ ರೂಪಿಸಬೇಕು ಎಂದು ಒತ್ತಾಯಿಸಿವೆ.
ಪರಿಷ್ಕೃತ ವರದಿಯು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬಹುದಾದ 14 ಅಂಶಗಳನ್ನು ಒಳಗೊಂಡಿದ್ದು, ಈ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಮಾರ್ಗ ಕುರಿತು ಸ್ಪಷ್ಟವಾಗಿ ವರದಿಯಲ್ಲಿ ಉಲ್ಲೇಖಿಸಿದೆ. ಪರಿಷ್ಕೃತ ಮಹಿಷಿ ವರದಿಯನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಿದರೆ ಇದಕ್ಕೆ ವಿರೋಧ ಪಕ್ಷಗಳೂ ಸಮ್ಮತಿ ಸೂಚಿಸಲಿವೆ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಹಾಗೂ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಭರವಸೆ ವ್ಯಕ್ತಪಡಿಸಿದ್ದಾರೆ.