

ಸೋಮವಾರಪೇಟೆ: ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಭಾಷೆಯನ್ನು ಶೇ.60ರಷ್ಟು ಬಳಸುವಂತೆ ಸರ್ಕಾರ ಆದೇಶಿಸಿದ್ದು, ಇದನ್ನು ಎಲ್ಲರೂ ಪಾಲಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿವಿಧ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ನವೀನ್‌ಕುಮಾರ್, ತಾಪಂ ಇಒ ಜಯಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಮನವಿ ಸಲ್ಲಿಸಿ, ತಮ್ಮ ವ್ಯಾಪ್ತಿಯ ಅಂಗಡಿ, ಮುಂಗಟ್ಟುಗಳು ಸರ್ಕಾರದ ಆದೇಶವನ್ನು ಪಾಲಿಸಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಿದರು. ಕರವೇ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ನಿತನ್, ಮಿಟ್ಟು, ರಾಘವೇಂದ್ರ ಕರ್ಕಳ್ಳಿ, ಮದನ್, ಮಧುಸೂದನ್ ಇದ್ದರು.