

ತುಮಕೂರು: ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅದ್ದೂರಿತನದ ಜತೆಗೆ ಮಕ್ಕಳಲ್ಲಿ ಕನ್ನಡಭಾಷಾಭಿಮಾನ ಬೆಳೆಸುವುದಲ್ಲದೆ ಸಾಹಿತಿ, ಕವಿಗಳು, ಜ್ಞಾನಪೀಠ ಪುರಸತರನ್ನು ಪರಿಚಯಿಸಲು ಶಾಲೆಗಳಲ್ಲಿ ಸಾಹಿತ್ಯ ಸಪ್ತಾಹ ಆಯೋಜಿಸಲು ಮುಂದಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾಡಳಿತದ ವತಿಯಿಂದ ನ.1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲೆಗಳಲ್ಲಿ ಸಾಹಿತ್ಯ ಸಪ್ತಾಹ ಆಚರಣೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡುವುದಲ್ಲದೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಕವಿಗಳ ಇತಿಹಾಸದ ಪರಿಚಯವಾಗುತ್ತದೆ. ಭಾರತದ ಇತರೆ ಭಾಷೆಗಳಿಗಿಂತ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದ್ದು, ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ರಾಜ್ಯೋತ್ಸವದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕಿಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಲು ತಿಳಿಸಿದರು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಲಿದ್ದಾರೆ. ಧ್ವಜಸ್ತಂಭ, ಗೌರವರಕ್ಷೆ ಸ್ವೀಕಾರ ಸೇರಿದಂತೆ ಕಾರ್ಯಕ್ರಮ ನಡೆಸಲು ಅಗತ್ಯ ವೇದಿಕೆ, ಗಣ್ಯರಿಗೆ ಆಸನ ವ್ಯವಸ್ಥೆ, ನಾಡಗೀತೆಯ ಗಾಯನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಧ್ವಜಾರೋಹಣದ ನಂತರ ಸಾಂಸತಿಕ ಕಾರ್ಯಕ್ರಮ ನೀಡಲು ಮಕ್ಕಳ ತಂಡಗಳನ್ನು ಸಿದ್ಧಪಡಿಸಿಕೊಂಡು ತಾಲೀಮು ನಡೆಸಲು ಹಾಗೂ ಕಾರ್ಯಕ್ರಮವನ್ನು ಸಂಘಟಿಸಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಖಡಕ್ ಸೂಚನೆ ನೀಡಿದರು.
ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಅಧಿಕಾರಿಗಳು/ ವಿವಿಧ ಕ್ಷೇತ್ರಗಳ ಗಣ್ಯರನ್ನೊಳಗೊಂಡ ಸಮಿತಿಯ ಮೂಲಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಿ, ಪಟ್ಟಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಸಂಜೆಯ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಶಾಲಾ ಮಕ್ಕಳಿಂದ ಕನ್ನಡ ಭಾಷೆಯ ಹಿರಿಮೆ-ಗರಿಮೆಗಳನ್ನು ಸಾರುವಂತಹ ವಿವಿಧ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಜಿ.ಪ್ರಭು, ಅರಣ್ಯ ಉಪಸಂರಕ್ಷಣಾಧಿಕಾರಿ ಎಚ್.ಅನುಪಮಾ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನಮೋಹನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್, ಮುಜರಾಯಿ ಇಲಾಖೆ ತಹಸೀಲ್ದಾರ್ ಸವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಬಾರಿ ತಾಯಿ ಭುವನೇಶ್ವರಿ ಮೆರವಣಿಗೆ
ತುಮಕೂರು ದಸರಾದ ಜಂಬೂಸವಾರಿ ಯಶಸ್ಸಿನ ಬಳಿಕ ಕನ್ನಡಮ್ಮನ ಉತ್ಸವವನ್ನು ವೈಭಯುತಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ನಗರದ ಪ್ರಮುಖಬೀದಿಗಳಲ್ಲಿ ಮೆರವಣಿಗೆ ನಡೆಸಬೇಕು. ಮೆರವಣಿಗೆಯಲ್ಲಿ ಭಾಗವಹಿಸುವ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ತಬ್ಧಚಿತ್ರಗಳು ನ. 1ರ ಬೆಳಗ್ಗೆ 7.30ಕ್ಕೆ ಟೌನ್ಹಾಲ್ ವೃತ್ತದ ಬಳಿ ಹಾಜರಿರಬೇಕು. ಮೆರವಣಿಗೆಯು ಟೌನ್ಹಾಲ್ ವೃತ್ತದಿಂದ ಆರಂಭಗೊಂಡು ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ತಲುಪಲಿದೆ ಎಂದು ಶುಭಕಲ್ಯಾಣ್ ತಿಳಿಸಿದರು.