

ಕಲಬುರಗಿ: 3 ದಶಕಗಳ ನಂತರ ನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಬಹುತೇಕ ಕಾರ್ಯಗಳು ಪೂರ್ಣಗೊಂಡಿದ್ದು, ಇಡೀ ನಗರವೂ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಗುಲ್ಬರ್ಗ ವಿಶ್ವವಿದ್ಯಾಲಯ ಆವರಣದ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ 5ರಂದು ಬೆಳಗ್ಗೆ 11.30ಕ್ಕೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 8ಕ್ಕೆ ಗುವಿವಿ ಆವರಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ ಪರಿಷತ್ನ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ನಾಡ ಧ್ವಜಾರೋಹಣ ನೆರವೇರಿಸುವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು. ಡಾ. ಎಚ್.ಎಸ್. ವೆಂಟಕೇಶಮೂರ್ತಿ ಸಮ್ಮೇಳನಾಧ್ಯಕ್ಷರ ಭಾಷಣ ಮಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ವಿಶ್ವವಿದ್ಯಾಲಯದ ಆವರಣದಲ್ಲಿ 5 ರಿಂದ 7ರವರೆಗೆ ಜರುಗಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭ ಬೆಳಗ್ಗೆ 11.30ಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಆವರಣದಲ್ಲಿನ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಏರ್ಪಡಿಸಲಾಗಿದೆ.
ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ ವೇದಿಕೆ ಉದ್ಘಾಟಿಸುವರು. ಸಂಸದ ಡಾ.ಉಮೇಶ ಜಾಧವ್ ಪರಿಷತ್ ಪುಸ್ತಕ ಬಿಡುಗಡೆ ಮಾಡುವರು. ಸಂಸದ ಭಗವಂತ ಖೂಬಾ ವಿವಿಧ ಲೇಖಕರ ಪುಸ್ತಕ ಬಿಡುಗಡೆ ಮಾಡುವರು. ನಾಡೋಜ ಡಾ. ಜೆ.ಎಸ್. ಖಂಡೇರಾವ್ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡುವರು. ಶಾಸಕರಾದ ಪ್ರಿಯಾಂಕ್ ಖರ್ಗೆ , ಡಾ. ಅಜಯಸಿಂಗ್, ದತ್ತಾತ್ರೇಯ ಪಾಟೀಲ್ ರೇವೂರ್, ಎಂ.ವೈ. ಪಾಟೀಲ್, ಸುಭಾಷ ಗುತ್ತೇದಾರ್, ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮೂಡ, ಕನೀಜ್ ಫಾತೀಮಾ, ಡಾ. ಅವಿನಾಶ ಜಾಧವ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಕಾರ್ಯದರ್ಶಿ ಆರ್.ಆರ್. ಜನ್ನು, ನಿರ್ದೇಶಕ ಎಸ್. ರಂಗಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.