

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯೋತ್ಸವ ಅಂಗವಾಗಿ ಜಯ ಕರ್ನಾಟಕ ಸಂಘಟನೆ ಧಾರವಾಡ ಜಿಲ್ಲಾ ಘಟಕ ವತಿಯಿಂದ ನ. 23ರಂದು ಬೆಳಗ್ಗೆ 11 ಗಂಟೆಗೆ ನಗರದ ಕರ್ನಾಟಕ ಕಲಾ ಕಾಲೇಜಿನಲ್ಲಿ ಕನ್ನಡಿಗರ ಹಬ್ಬವನ್ನು ಏರ್ಪಡಿಸಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಡಿಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರೆಡ್ಡಿ, ಮಾಜಿ ಶಾಸಕ ಅಮೃತ ದೇಸಾಯಿ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಭಾಗವಹಿಸಲಿದ್ದಾರೆ. ಸಂಘಟನೆ ರಾಜ್ಯಾಧ್ಯಕ್ಷ ಡಾ. ಬಿ.ಎನ್.ಜಗದೀಶ ಅಧ್ಯಕ್ಷತೆ ವಹಿಸುವರು.
ನಾಡು-ನುಡಿಗೆ ಶ್ರಮಿಸಿದ ಗಣ್ಯರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಗುವುದು. ಇದಕ್ಕೂ ಪೂರ್ವದಲ್ಲಿ ನಾಡು -ನುಡಿ, ನೆಲ-ಜಲ, ಭಾಷೆ ಹಾಡುಗಳೊಂದಿಗೆ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಸುಧೀರ ಮುಧೋಳ ತಿಳಿಸಿದ್ದಾರೆ.