

ಮಂಡ್ಯ: ಜಿಲ್ಲೆಯಲ್ಲಿ ಚಿರತೆ, ಆನೆ ಮತ್ತು ಹಂದಿಗಳ ಹಾವಳಿಯಿಂದ ಜನ, ಜಾನುವಾರುಗಳಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡಪರ ಸಂಘಟನೆಗಳ ಒಕ್ಕೂಟ)ಯಿಂದ ಪ್ರತಿಭಟನೆ ನಡೆಯಿತು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕಾಡುಪ್ರಾಣಿಗಳ ದಾಳಿಯಿಂದ ಬೆಳೆ ನಷ್ಟವಾಗುತ್ತಿದೆ. ಇದರಿಂದಾಗಿ ರೈತರ ಜೀವನ ಅತಂತ್ರವಾಗಿದೆ. ಚಿರತೆ ದಾಳಿಗೆ ಜಾನುವಾರು ಬಲಿಯಾಗುತ್ತಿದ್ದು, ರೈತರು ಸಾವಿರಾರೂ ರೂ. ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಮಾತ್ರವಲ್ಲದೆ ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ. ನೀಡಬೇಕು. ಶೀಘ್ರವೇ ಭತ್ತ, ರಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಗ್ರಾಮಾಂತರ ಪ್ರದೇಶಗಳಿಗೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಬೇಕು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಮು, ಗಟ್ಟಹಳ್ಳಿ ಶಿವಲಿಂಗಯ್ಯ, ಚಂದ್ರು, ವೆಂಕಟೇಶ್, ಶಿವರಾಮು, ಗಜೇಂದ್ರ ಇತರರಿದ್ದರು.