

ಬೆಳಗಾವಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬುಧವಾರ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಸುಮಾರು 500 ಬೈಕ್‌ಗಳ ಬೃಹತ್ ರ‌್ಯಾಲಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರ‌್ಯಾಲಿ ಬಳಿಕ ಕೆಪಿಟಿಸಿಎಲ್ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿ ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವನ್ನಪ್ಪಿದ ಬೆಳಗಾವಿ ಜಿಲ್ಲೆಯ ಸೈನಿಕರ ಪರಿವಾರದವರನ್ನು ವಿಶೇಷವಾಗಿ ಸ್ವಾಗತಿಸಲಾಯಿತು.
ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗಿ ಶೌರ್ಯಚಕ್ರ, ಸೇನಾ ಮೆಡೆಲ್ ಪಡೆದಂತಹ ಮಾಜಿ ಸೈನಿಕರು ಪಾಲ್ಗೊಂಡಿದ್ದರು. ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ದಿವ್ಯಸಾನ್ನಿದ್ಯ ವಹಿಸಿದ್ದರು. ಮಾಜಿ ಎಂಎಲ್‌ಸಿ ಮಹಾಂತೇಶ ಕವಟಿಗಿಮಠ, ಸಂಜಯ ಪಾಟೀಲ, ಸತೀಶ ಚೌಲಿಗೆರ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷ ಬಸಪ್ಪ ತಳವಾರ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ಪೂಜೇರಿ ರಚಿಸಿದ ‘ಮಾಜಿ ಸೈನಿಕನ ಮನ’ ಎಂಬ ಕವನವನ್ನು ಅಲ್ಲಮಪ್ರಭು ಸ್ವಾಮೀಜಿ ಬಿಡುಗಡೆಗೊಳಿಸಿದರು. ಜಗದೀಶ ಪೂಜೇರಿ ಪ್ರಾಸ್ತಾವಿಕ ಮಾತನಾಡಿದರು. ರಮೇಶ ಚೌಗುಲಾ ಸ್ವಾಗತಿಸಿದರು. ಖಜಾಂಚಿ ಶಿವಬಸಪ್ಪ ಕಾಡಣ್ಣವರ ವಂದಿಸಿದರು.