ಅ.15ರಂದು ಕೆವಿಎಸ್-109 ವಿಚಾರ ಸಂಕಿರಣ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಹೇಳಿಕೆ

Karnataka association president press conference Mandya
Published on

ಮಂಡ್ಯ: ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಅ.15ರಂದು ನಿತ್ಯಸಚಿವ ‘ಕೆ.ವಿ.ಶಂಕರಗೌಡ-109 ಒಂದು ನೆನಪು’ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಿಲ್ಲಾಡಳಿತ, ಕೆ.ವಿ.ಶಂಕರಗೌಡ ಅಧ್ಯಯನ ಪೀಠ, ಕರ್ನಾಟಕ ಸಂಘ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಸಮಾರಂಭವನ್ನು ಅಂದು ಬೆಳಗ್ಗೆ 10.30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ.ಧರಣಿದೇವಿ ಮಾಲಗತ್ತಿ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಹಿರಿಯ ಸಾಹಿತಿ ಡಾ.ರಾಗೌ ಆಶಯ ನುಡಿಗಳನ್ನಾಡಲಿದ್ದಾರೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಮತ್ತು ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಕಸಾಪ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕಿ ಎಚ್.ಆರ್.ಸುಜಾತಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮಧ್ಯಾಹ್ನ 12ಕ್ಕೆ ‘ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಗೆ ಕೆ.ವಿ.ಶಂಕರಗೌಡರ ಕೊಡುಗೆ’ ವಿಚಾರದ ಬಗ್ಗೆ ಹಿರಿಯ ಸಾಹಿತಿ ಡಾ.ರಾಜಪ್ಪ ದಳವಾಯಿ ಹಾಗೂ 1.30ಕ್ಕೆ ‘ಮಂಡ್ಯ ಜಿಲ್ಲೆಯ ಸಮಾಜೋ-ಆರ್ಥಿಕ ಮುನ್ನಡೆಗೆ ಕೆ.ವಿ.ಶಂಕರಗೌಡರ ಕೊಡುಗೆ’ ಕುರಿತು ಬೆಂಗಳೂರು ಕೇಂದ್ರ ವಲಯ ಐಜಿ ಡಾ.ಬಿ.ಆರ್.ರವಿಕಾಂತೇಗೌಡ ಮತ್ತು 2.30ಕ್ಕೆ ‘ಸ್ವಾತಂತ್ರಾೃನಂತರದ ಕರ್ನಾಟಕ ರಾಜಕೀಯದಲ್ಲಿ ಕೆ.ವಿ.ಶಂಕರಗೌಡರ ಸ್ಥಾನ’ ವಿಷಯ ಕುರಿತು ನಿವೃತ್ತ ಪ್ರಾಚಾರ್ಯ ಡಾ.ಎಸ್.ಬಿ.ಶಂಕರಗೌಡ ಉಪನ್ಯಾಸ ನೀಡಲಿದ್ದಾರೆಂದರು.

ಸಂಜೆ 4ಕ್ಕೆ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ‘ಮತ್ತೆ ಮತ್ತೆ ಶಂಕರಗೌಡ’ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಸಮಾರೋಪ ನುಡಿಗಳನ್ನಾಡಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ಮಾಜಿ ಎಂಎಲ್‌ಸಿ ಬಿ.ರಾಮಕೃಷ್ಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಭಾಗವಹಿಸುವರು ಎಂದು ತಿಳಿಸಿದರು.

ಕರ್ನಾಟಕ ಸಂಘದ ಉಪಾಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಕಾರ್ಯದರ್ಶಿ ಲೋಕೇಶ್ ಚಂದಗಾಲು, ನಿರ್ದೇಶಕ ನಾಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net