ವಿದ್ಯಾರ್ಥಿನಿ ಹತ್ಯೆ ಪ್ರಕರಣ ಕಟ್ಟುನಿಟ್ಟಿನ ಕ್ರಮವಹಿಸಲು ಸರ್ಕಾರಕ್ಕೆ ಆಗ್ರಹ

Vasudev sharma
Published on

ಬೆಂಗಳೂರು: ಕೊಡಗಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೀನಾ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪತ್ರ ಬರೆದಿರುವ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಅಧ್ಯಕ್ಷ ಡಾ. ವಾಸುದೇವ ಶರ್ಮ ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೀನಾ ಪ್ರಕರಣದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಬಾರದು, ಬಾಲಕಿಯನ್ನು ಹತ್ಯೆ ಮಾಡಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಜವಾಬ್ದಾರಿ ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜವಾಬ್ದಾರಿ ಅಲ್ಲ ಎಂದು ತಿಳಿದು ಎಲ್ಲಾ ಇಲಾಖೆಗಳ ಸಂಯೋಜಿತ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಪ್ರತಿ ಗ್ರಾಮದಲ್ಲಿಯೂ ಅರಿವು ಮೂಡಿಸುವ ಕೆಲಸ ಆಗಬೇಕು. ಎಲ್ಲ ಸಮುದಾಯಗಳಲ್ಲಿ ಲಿಂಗ ಸಮಾನತೆ ಬಗ್ಗೆ ವ್ಯಾಪಕವಾದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದು ಶಾಲಾ ಮಟ್ಟದಿಂದ ಸಮುದಾಯದ ಜನರವರೆಗೆ ನಡೆಯಬೇಕು. ಬಾಲ್ಯ ವಿವಾಹಕ್ಕಾಗಿ ನಿಶ್ಚಿತಾರ್ಥ ಮಾಡುವುದು ಕೂಡ ಬಾಲ್ಯ ವಿವಾಹದ ಸಿದ್ಧತೆ ಎಂದು ಪರಿಗಣಿಸಿ ಶಿಕ್ಷಣಗೆ ಗುರಿಪಡಿಸಬೇಕು ಎಂದು ಹೇಳಿದ್ದಾರೆ.

ಬಾಲ್ಯ ವಿವಾಹ ತಡೆಯುವ ಉದ್ದೇಶದಿಂದ ರಚಿತವಾಗಿರುವ ಮಹಿಳೆಯರು ಮತ್ತು ಮಕ್ಕಳ ಸಂರಕ್ಷಣಾ ಸಮಿತಿ ಹೆಸರಿಗಷ್ಟೇ ಇರದೆ, ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಇದರ ಜವಾಬ್ದಾರಿಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವಹಿಸಬೇಕು. ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳ ಕರ್ತವ್ಯಗಳಲ್ಲಿ ಎಲ್ಲ ಇಲಾಖೆ ಅಧಿಕಾರಿಗಳಿಗೂ ತಿಳಿಸಿ ಕರ್ತವ್ಯಪರರನ್ನಾಗಿ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net