ಮೈಸೂರಿನ ರಸ್ತೆ ಗುಂಡಿ ತಕ್ಷಣ ಮುಚ್ಚಿಸಲು ಕರ್ನಾಟಕ ಹಿತರಕ್ಷಣಾ ವೇದಿಕೆ ಆಗ್ರಹ

29
Published on

ಮೈಸೂರು: ಪ್ರವಾಸಿ ತಾಣವಾದ ಮೈಸೂರಿನ ನಗರಗಳು ಗುಂಡಿ ಬಿದ್ದಿದ್ದು ತಕ್ಷಣವೇ ಮುಚ್ಚಿಸಬೇಕು. ಅಲ್ಲದೇ ಫುಟ್‌ಪಾತ್ ಒತ್ತುವರಿಗೊಂಡಿದ್ದು, ಅದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ರೇಖಾ ಅವರಿಗೆ ಮನವಿ ಸಲ್ಲಿಸಿದ ವೇದಿಕೆ ಕಾರ್ಯಕರ್ತರು, ತಕ್ಷಣವೇ ಗುಂಡಿಗಳನ್ನು ಮುಚ್ಚಿಸಿ, ಫುಟ್‌ಪಾತ್ ತೆರವುಗೊಳಿಸುವಂತೆ ಒತ್ತಾಯಿಸಿದರು.

ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಮಾತನಾಡಿ, ನಾಡಹಬ್ಬ ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾದರೂ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇನ್ನೂ ಚಾಲನೆ ದೊರೆತಿಲ್ಲ. ನಗರದ ಬಹುತೇಕ ರಸ್ತೆಗಳು ಗುಂಡಿಮಯವಾಗಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ ಎಂದರು.

ದಸರಾ ಮಾತ್ರವಲ್ಲದೆ ಎಲ್ಲ ಸಮಯದಲ್ಲೂ ಪ್ರವಾಸಿಗರು ಭೇಟಿ ನೀಡುತ್ತಾರೆ. ದಸರಾ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಸ್ತೆಗಳು ನಗರದ ಸೌಂದರ್ಯಕ್ಕೆ ಕಪ್ಪುಚುಕ್ಕೆಯಾಗಿದ್ದು, ರಸ್ತೆಗಳಲ್ಲಿ ವಾಹನ ಚಾಲನೆ ಮಾಡಲು ಹರಸಹಾಸ ಪಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಹೇಳಿದರು.

ಮಳೆಯಿಂದಾಗಿ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅದನ್ನು ಗುರುತಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿದೆ. ಕೆಲವು ತಿಂಗಳ ಹಿಂದೆ ಗುಂಡಿ ಮುಚ್ಚುವ ಕಾಮಗಾರಿ ಕೈಗೊಳ್ಳಲಾಯಿತು. ಆದರೆ ನಗರದ ಎಲ್ಲ ರಸ್ತೆಗಳನ್ನು ಪೂರ್ಣಗೊಳಿಸಿಲ್ಲ ಎಂದರು.

ಮುಡಾ ಮಾಜಿ ಸದಸ್ಯೆ ಲಕ್ಷ್ಮೀದೇವಿ, ಕೆ.ಆರ್.ಬ್ಯಾಂಕ್ ನಿರ್ದೇಶಕ ಜಿ.ಎಂ.ಪಂಚಾಕ್ಷರಿ, ಮುಖಂಡರಾದ ಆನಂದ್, ಎಸ್.ಎನ್.ರಾಜೇಶ್,ಬಸವರಾಜ್ ಮಸಲಿ, ಗೋಪಿ, ಮಂಜುನಾಥ್, ರಾಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net