ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ ಬೇಡ

Pralhad Joshi 3
Published on

ಹುಬ್ಬಳ್ಳಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಹಲ್ಲೆ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ಮತ್ತು ಮಹಾರಾಷ್ಟ್ರ ಮಧ್ಯೆ ಸಂಚರಿಸುವ ಬಸ್​ಗಳನ್ನು ಸ್ಥಗಿತಗೊಳಿಸುವುದು ಬೇಡ. ಇದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವವರು ಯಾರೇ ಇದ್ದರೂ ಅವರ ವಿರುದ್ಧ ಎರಡೂ ರಾಜ್ಯಗಳ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ಇಲ್ಲವೆಂದು ಪೊಲೀಸ್ ಆಯುಕ್ತರು ಹಾಗೂ ಸಚಿವರು ನೀಡುತ್ತಿರುವ ಹೇಳಿಕೆ ಬೇಜವಾಬ್ದಾರಿತನದ್ದು. ಅವರಿಗೆ ಗೊತ್ತಿಲ್ಲದೇ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ಹೇಗೆ ದಾಖಲಿಸಿದರು ಎಂದು ಪ್ರಶ್ನಿಸಿದರು.

ಈ ಹಲ್ಲೆ ಹಾಗೂ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ಹಾಕಿರುವುದನ್ನು ಗಮನಿಸಿದರೆ ಸರ್ಕಾರಕ್ಕೆ ಆಡಳಿತದ ಮೇಲೆ ನಿಯಂತ್ರಣ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ ಎಂದು ಟೀಕಿಸಿದರು.

ಅಭಿವೃದ್ಧಿ ಕಾರ್ಯ ಮಾಡುವ ಭರವಸೆ ನೀಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಮುಖಂಡರು, ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಸಮಸ್ಯೆಗಳಿವೆ. ಸಕಾಲದಲ್ಲಿ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ. ಹಲವಾರು ಸೌಲಭ್ಯಗಳನ್ನು ಉಚಿತವಾಗಿ ಕೊಡುವುದಾಗಿ ಹೇಳಿದ್ದ ಕಾಂಗ್ರೆಸ್ ಸರ್ಕಾರ, ನಿತ್ಯೋಪಯೋಗಿ ವಸ್ತುಗಳ ಬೆಲೆಗಳನ್ನು ಗಗನಕ್ಕೆ ಏರಿಸಿದೆ. ರಾಜ್ಯದ ಜನ ಸಾಯಬೇಕು ಅಂದರೂ ಹಣ ಕೊಟ್ಟು ಸಾಯುವ ದುಸ್ಥಿತಿ ನಿರ್ವಣಗೊಂಡಿದೆ ಎಂದು ವ್ಯಂಗ್ಯವಾಡಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಗಳನ್ನು ಅಪಮಾನ ಮಾಡೋದೆ ಕೆಲಸವಾಗಿದೆ. ಈ ಮೊದಲು ದೊಡ್ಡ ಖರ್ಗೆ ಹಿಂದುಗಳ ವಿರುದ್ಧ ಮಾತನಾಡುತ್ತಿದ್ದರು. ಇದೀಗ ಅವರ ಮಗ ಆ ಚಾಳಿ ಮುಂದುವರಿಸಿದ್ದಾರೆ ಎಂದು ಟೀಕಿಸಿದರು.

ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಹಾಕುವುದಾಗಿ ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಒಂದು ತಿಂಗಳು ಮುಂದೂಡಿದೆ. ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಆರೋಪಿಸಿದರು.

ಸಂಡೂರು ಅಕ್ರಮ ಜಮೀನು ಒತ್ತುವರಿ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ಕೇಳಿರುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಪ್ರಲ್ಹಾದ ಜೋಶಿ, ಕಾಂಗ್ರೆಸ್ ಸರ್ಕಾರ ಈ ಹಿಂದಿನಿಂದಲೂ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಹಳೇ ಪ್ರಕರಣಗಳನ್ನ ತೆಗೆಯಿಸಿ ತನಿಖೆ ನಡೆಸುತ್ತಿದೆ. ಇದೇ ರೀತಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹಿಂದಿನ ಪ್ರಕರಣದ ಬಗ್ಗೆಯೂ ತನಿಖೆ ನಡೆಸಿದೆ. ಆದರೆ, ಯಡಿಯೂರಪ್ಪ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆಯಲಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ನಿಲ್ಲಲಿಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮೂಲ ಸೌಕರ್ಯ ಕೊರತೆ ಬಗ್ಗೆ ಕೆಲವು ಉದ್ಯಮಿಗಳು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರವು ಉದ್ಯಮಿಗಳನ್ನು ಅವಮಾನಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net