ಜ.9ರಿಂದ ಮೂರು ದಿನ ವಿಭಾಗೀಯ ನಾಟಕೋತ್ಸವ: ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಮಾಹಿತಿ

Karnataka Sangha press conference Mandya
Published on

ಮಂಡ್ಯ: ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಕರ್ನಾಟಕ ಸಂಘದ ಸಹಯೋಗದಲ್ಲಿ ನಿತ್ಯಸಚಿವ ಕೆ.ವಿ.ಶಂಕರಗೌಡ ನೆನಪಿನಾರ್ಥ ನಗರದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರಂಗಮಂದಿರದಲ್ಲಿ ಜ.9ರಿಂದ 11ರವರೆಗೆ ವಿಭಾಗೀಯ ಮಟ್ಟದ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ತಿಳಿಸಿದರು.

9ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನಾಟಕೋತ್ಸವ ಉದ್ಘಾಟಿಸುವರು. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ಹಾಗೂ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಂಜೆ 6ಗಂಟೆಗೆ ನಟರಾಜ್ ಹೊನ್ನವಳ್ಳಿ ಅವರ ರಂಗರೂಪ ಮತ್ತು ನಿರ್ದೇಶನದಲ್ಲಿ ಬೆಂಗಳೂರಿನ ಸಮುದಾಯ ರಂಗ ತಂಡ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಾದಂಬರಿ ಆಧಾರಿತ ’ಜುಗಾರಿ ಕ್ರಾಸ್’ ನಾಟಕ ಪ್ರದರ್ಶನಗೊಳ್ಳಲಿದೆ. 10ರಂದು ಸಂಜೆ 5 ಗಂಟೆಗೆ ಜನತಾ ಶಿಕ್ಷಣ ಟ್ರಸ್ಟ್ ನಿರ್ದೇಶಕ ಡಾ.ರಾಮಲಿಂಗಯ್ಯ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಿ.ಪಿ.ಭಕ್ತವತ್ಸಲ, ಆಯುಕ್ತ ಡಾ.ಎಚ್.ಅನಿಲ್ಕುಮಾರ್ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಡಾ.ಜಾಹಿದಾ, ಸಂಘಟಕ ಕುವೆಂಪು ಪ್ರಕಾಶ್ ಉಪಸ್ಥಿತಿಯಲ್ಲಿ ಬಿ.ಎಂ.ಶಶಿಕಲಾ ರಂಗರೂಪ ಮತ್ತು ನಿರ್ದೇಶನದಲ್ಲಿ ಮೈಸೂರಿನ ಶಶಿ ಥಿಯೇಟರ್‌ನ ಕಲಾವಿದರು ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರ ‘ಉರಿಯ ಉಯ್ಯಲೆ’ ನಾಟಕ ಪ್ರಸ್ತುತಪಡಿಸುವರು ಎಂದು ತಿಳಿಸಿದರು.

11ರ ಮಧ್ಯಾಹ್ನ 3ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಪೊಲೀಸ್ ಮಹಾನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಪ್ರಧಾನ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಭಾಗಹಿಸಲಿದ್ದಾರೆ. ಕಾಳೇನಹಳ್ಳಿಯ ಹಿರಿಯ ಕಲಾವಿದ ಟಿ.ಕೆಂಚೇಗೌಡ ಅವರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಂಜೆ 4ಗಂಟೆಗೆ ಕಾರಸವಾಡಿ ಸುರೇಶ್ ಅವರ ಸಂಗೀತ ಮತ್ತು ನಿರ್ದೇಶನದಲ್ಲಿ ‘ಗದಾಯುದ್ಧ’ ಪೌರಾಣಿಕ ನಾಟಕವನ್ನು ಮಾಂಡವ್ಯ ಕಲಾ ಟ್ರಸ್ಟ್ ಪ್ರಸ್ತುತಪಡಿಸಲಿದೆ ಎಂದು ವಿವರಿಸಿದರು.

ನಾಟಕೋತ್ಸವದ ಸಂಚಾಲಕ ಎ.ಎಸ್.ಚಂದ್ರಶೇಖರ್ ಮಾತನಾಡಿ, ನಾಟಕ ವೀಕ್ಷಣೆಗೆ ಉಚಿತ ಪ್ರವೇಶವಿದೆ. ಕಲಾಪ್ರೇಮಿಗಳು, ಯುವಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಕರ್ನಾಟಕ ಸಂಘದ ಕಾರ್ಯದರ್ಶಿ ಸೋಮಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net