

ಮಂಡ್ಯ: ಮಹಾರಾಷ್ಟ್ರಕ್ಕೆ ಜೈಕಾರ ಹಾಕಿರುವ ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣಗೌಡ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ)ಯ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಚಿವ ಕೆ.ಸಿ.ನಾರಾಯಣಗೌಡ ಅವರ ಪ್ರತಿಕೃತಿ ದಹಿಸುವ ಮೂಲಕ ಮತ್ತು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಸಿ.ನಾರಾಯಣಗೌಡ ಮಹಾರಾಷ್ಟ್ರದ ಪರ ಜೈಕಾರ ಕೂಗಿರುವುದು ಖಂಡನೀಯ ಮತ್ತು ನಾಡದ್ರೋಹವಾಗಿದೆ. ಬೆಳಗಾವಿಯಲ್ಲಿ ಕನ್ನಡಿಗರು ಮಹಾರಾಷ್ಟ್ರದಿಂದ ಹಲವು ಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕನ್ನಡಿಗರ ಪರ ಮಾತನಾಡದ ಸಚಿವರು, ಮಹಾ ರಾಷ್ಟ್ರದ ಪರ ಮಾತನಾಡುವುದು ಸರಿಯಲ್ಲ. ಅಲ್ಲದೆ, ಈ ಮೂಲಕ ಕನ್ನಡಿಗರ ವಿರುದ್ಧವಾಗಿ ಹೇಳಿಕೆ ಕೊಟ್ಟಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ಅವರು ತಮ್ಮ ಸಚಿವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿ ದರು.ಸಂಘಟನೆ ಜಿಲ್ಲಾಧ್ಯಕ್ಷ ಶಂಕರೇಗೌಡ, ಉಪಾಧ್ಯಕ್ಷ ಮಾ.ಸೋ.ಚಿದಂಬರ್ ಇತರರು ಪ್ರತಿಭಟನೆಯಲ್ಲಿ ಇದ್ದರು.