

ಮಡಿಕೇರಿ:
ಗುರುವಾರ ನಿಧನರಾದ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಆತ್ಮಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂತಾಪ ಕೋರಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಅಧ್ಯಕ್ಷತೆಯಲ್ಲಿ ಪರಿಷತ್ತಿನ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಂತಾಪ ಸಭೆಯಲ್ಲಿ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಕುರಿತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಶ್ರವಣಬೆಳಗೊಳದಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಚಾರುಕೀರ್ತಿ ಭಟ್ಟಾರಕ ಶ್ರೀಗಳಿಗೆ ಸಲ್ಲುತ್ತದೆ. ಅತ್ಯಂತ ಸೌಮ್ಯ ಸ್ವಭಾವದ ಸರಳತೆಯ ಪ್ರತಿರೂಪವಾಗಿದ್ದ ಶ್ರೀಗಳ ಅಗಲಿಕೆ ನಾಡಿನ ಸಾಮಾಜಿಕ ಹಾಗು ಧಾರ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.
ಈ ಸಂದರ್ಭ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ರೇವತಿ ರಮೇಶ್, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಸಹನಾ ಕಾಂತಬೈಲು, ಮಂಜುನಾಥ್, ಮೂರ್ನಾಡು ರಮ್ಯಾ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ ಇದ್ದರು.