ಕಾಸರಕೋಡು ಬಂದು ನಿರ್ಮಾಣ ಮಾಡಿಯೇ ಮಾಡುತ್ತೇವೆ

Kasarakodu port meeting
Published on

ಕಾರವಾರ:ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ನಡೆಸಲಾಗುತ್ತಿದ್ದು, ಸ್ಥಳೀಯರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರವು ಸಾರ್ವಜನಿಕ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಕಾಸರಕೋಡು ಬಂದರು ನಿರ್ಮಾಣ ಕಾಮಗಾರಿಗೆ ಸ್ಥಳೀಯ ಜನತೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಯೋಜನೆಯ ಕುರಿತ ಸಾರ್ವಜನಿಕರ ಅಹವಾಲು ಮತ್ತು ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲಾಗುವುದು. ಇದೇ ತಿಂಗಳಲ್ಲಿ ಯೋಜನೆಯ ಕಾಮಗಾರಿ ಕುರಿತಂತೆ ಸರ್ವೆ ಕಾರ್ಯ ಆರಂಭಿಸಲಾಗುವುದು ಹಾಗೂ ಈ ಬಗ್ಗೆ ಸಾರ್ವಜನಿಕರಿಗೆ ದಿನಪತ್ರಿಕೆಗಳ ಮೂಲಕ ಮಾಹಿತಿ ನೀಡಲಾಗುವುದು ಎಂದರು.
ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಸಾರ್ವಜನಿಕರಿಗೆ ಗರಿಷ್ಠ ಪ್ರಮಾಣದ ಪರಿಹಾರ ಮೊತ್ತ, ಪರ್ಯಾಯ ಜಮೀನು ಅಲ್ಲದೇ ಕುಟುಂಬದ ಸದಸ್ಯರಿಗೆ ಉದ್ಯೋಗ ಒದಗಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು, ಗ್ರಾಮಸ್ಥರ ಎಲ್ಲಾ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಹಾಗೂ ನ್ಯಾಯಯುತವಾಗಿ ಈಡೇರಿಸಲಾಗುವುದು. ಅಲ್ಲದೇ ಈ ಹಿಂದೆ ಸ್ಥಳೀಯರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಕೂಡಾ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲಾಗುತ್ತಿದೆ ಎಂದರು.
ಈಗಾಗಲೇ ಯೋಜನೆಯ ಸಾಕಷ್ಟು ವಿಳಂಬವಾಗಿದ್ದು, ಯೋಜನೆ ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನಾ, ಬಂದರು ಇಲಾಖೆಯ ಕ್ಯಾ.ಸ್ವಾಮಿ ಹಾಗೂ ಕಾಸರಕೋಡು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net