

ಬೆಂಗಳೂರು: ಆಧುನಿಕ ತಂತ್ರಜ್ಞಾನ ಆಧಾರಿತ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಆರೈಕೆ ಸೌಲಭ್ಯಗಳು ಜನಸಾಮಾನ್ಯರಿಗೂ ಲಭ್ಯವಾಗಬೇಕು ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅಭಿಪ್ರಾಯಪಟ್ಟರು.
ನಗರದ ಮಾರತ್ತಹಳ್ಳಿಯ ಕಾವೇರಿ ಆಸ್ಪತ್ರೆಯಲ್ಲಿ ಕೀಲು ಜೋಡಣೆ, ಮೂಳೆ ಶಸ್ತ್ರ ಚಿಕಿತ್ಸೆಗೆ ನೂತನವಾಗಿ ಅಳವಡಿಸಿಕೊಂಡಿರುವ ರೊಬೋಟಿಕ್ಸ್ ತಂತ್ರಜ್ಞಾನ ವ್ಯವಸ್ಥೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ದಿನೇ ದಿನೇ ಬದಲಾಗುತ್ತಿರುವ ಆರೋಗ್ಯ ಕ್ಷೇತ್ರದಲ್ಲಿ ಯಂತ್ರ ಚಾಲಿತ ಉಪಕರಣಗಳು, ಕೃತಕ ಬುದ್ಧಿಮತ್ತೆ, ರೊಬೋಟಿಕ್ಸ್ ತಂತ್ರಜ್ಞಾನ ಬಹುಮುಖ್ಯ ಪಾತ್ರ ವಹಿಸುತ್ತಿವೆ. ನಿಖರವಾಗಿ ಕಾಯಿಲೆ ಪತ್ತೆ, ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಉತ್ತಮ ಆರೈಕೆ ಸಾಧ್ಯವಾಗುತ್ತಿದೆ ಎಂದ ಅವರು, ಬೆಳೆಯುತ್ತಿರುವ ತಂತ್ರಜ್ಞಾನವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ಜನಸಾಮಾನ್ಯರಿಗೂ ಲಭ್ಯವಾಗಬೇಕು. ಆರೋಗ್ಯಯುತ ಜನರಿಂದ ಉತ್ತಮ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.
ಮೂಳೆ ಚಿಕಿತ್ಸೆಗೆ ಎಐ ತಂತ್ರಜ್ಞಾನ ಆಧಾರಿತ ರೊಬೋಟಿಕ್ಸ್ ತಂತ್ರಜ್ಞಾನವನ್ನು ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ. ಇದು ಮಂಡಿನೋವು ಚಿಕಿತ್ಸೆ, ಅಪಘಾತಗಳು, ಕೀಲು ಜೋಡಣೆ ಮುಂತಾದ ಶಸ್ತ್ರಚಿಕಿತ್ಸೆಗಳಿಗೆ ಅನುಕೂಲಕರವಾಗಿದೆ. ರೋಗಿಯು ಶೀಘ್ರದಲ್ಲೇ ಗುಣಮುಖರಾಗಿ ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಜಯ್ ಭಾಸ್ಕರ್, ಆರ್ಥೋಪೇಡಿಕ್ ವಿಭಾಗದ ಮುಖ್ಯಸ್ಥ ಡಾ. ರಘು ನಾಗರಾಜ್ ಇತರರು ಇದ್ದರು.