

ಕವಿತಾಳ: ಜನರು ತಾಲೂಕು ಮತ್ತು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಆಯೋಜಿಸಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಂಗಸುಗೂರು ಸಹಾಯಕ ಆಯುಕ್ತ ರಾಹುಲ್ ಸಂಕನೂರು ಹೇಳಿದರು.
ಸಮೀಪದ ತುಪ್ಪದೂರಿನಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 5ಎ ನಾಲೆ ಯೋಜನೆ ಜಾರಿ ಹೋರಾಟಗಾರರು ಮಾತನಾಡಿ, 12 ವರ್ಷದಿಂದ ನೀರಾವರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಇದುವರೆಗೆ ನಮ್ಮ ಸಮಸ್ಯೆಯನ್ನು ಪರಿಹರಿಸಲಾಗಿಲ್ಲ. ಕೆಲ ತಿಂಗಳ ಹಿಂದೆ ಪರಸಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದೀರಿ. ಆದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅಲ್ಲಿ ಪರಿಹಾರವಾಗದೆ ಇರುವುದನ್ನು ಇಲ್ಲಿ ಎನು ಪರಿಹಾರ ಮಾಡುತ್ತೀರಿ. ಸಭೆ ರದ್ದುಗೊಳಿಸಿ, ಜಿಲ್ಲಾಧಿಕಾರಿ ಬಂದು ಸಮಸ್ಯೆಗೆ ಪರಿಹಾರ ಕಲ್ಪಿಸದ ನಂತರ ಸಭೆ ನಡೆಸಿ ಎಂದು ಒತ್ತಾಯಿಸಿದರು.