

ಮೈಸೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.10 ರಂದು ಬೆಳಗ್ಗೆ 11.30 ಗಂಟೆಗೆ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಕಾಯಕ ಶರಣರ ಜಯಂತಿಯನ್ನು ಏರ್ಪಡಿಸಲಾಗಿದೆ.
ಶ್ರೀ ನಟರಾಜ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಚಿದಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಸಿ.ಅನಿಲ್ ಕುಮಾರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸಪ್ರಸಾದ್, ಸುಮಲತಾ ಅಂಬರೀಶ್ ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಕೃಷ್ಣಮೂರ್ತಿ ಚಮರಂ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.