ಕಾರ್ಯವೈಖರಿ ಬದಲಿಸಿಕೊಳ್ಳದಿದ್ದರೆ ಶಿಸ್ತು ಕ್ರಮ

02 gkp 02
Published on

ಗೋಣಿಕೊಪ್ಪ : ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದ್ದು, ಕೆಲವರು ಕಾರ್ಯವೈಖರಿ ಸುಧಾರಣೆ ಮಾಡಿಕೊಳ್ಳದಿದ್ದರೆ ಶಿಸ್ತು ಕ್ರಮ ವಹಿಸಲಾಗುವುದು ಎಂದು ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಖಡಕ್ ಎಚ್ಚರಿಕೆ ನೀಡಿದರು. ಪೊನ್ನಂಪೇಟೆ ಸಾಮರ್ಥ್ಯಸೌಧದಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ಅಧಿಕಾರಿಗಳ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳಿಂದ ಯಾರೂ ವಂಚಿತರಾಗಬಾರದು. ಕಚೇರಿಗೆ ಆಗಮಿಸಿದ ವೇಳೆ ಅಗತ್ಯ ಕೆಲಸಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕೆಲವು ಅಧಿಕಾರಿಗಳು ತಮ್ಮ ಕಾರ್ಯವೈಖರಿಯಿಂದ ಅಪಖ್ಯಾತಿಗೆ ಒಳಗಾಗಿದ್ದಾರೆ. ಅವರ ಕಾರ್ಯ ಶೈಲಿ ಬದಲಾಗಬೇಕು ಎಂದು ಸೂಚಿಸಿದರು. ನೆಪ ಹೇಳಿಕೊಂಡು ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಸಿದರು.
ಶಿಕ್ಷಕರು ಪಾಠ ಮಾಡಬೇಕು:ಶಿಕ್ಷಕರು ಕೆಲವು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡದೇ ಸಂಘದ ಹೆಸರಿನಲ್ಲಿ ಸುತ್ತಾಡುತ್ತಿರುವುದು ಗಮನಕ್ಕೆ ಬಂದಿದೆ. ಮೊದಲು ಮಕ್ಕಳಿಗೆ ಪಾಠ ಮಾಡುವುದು ಶಿಕ್ಷಕರ ಜವಾಬ್ದಾರಿ. ನಂತರ ಸ್ವಂತ ಸಮಯದಲ್ಲಿ ಸಂಘ, ಸಂಸ್ಥೆಗಳ ಕೆಲಸ ಮಾಡಬೇಕು ಎಂದು ಬಿಇಒ ಪ್ರಕಾಶ್‌ಗೆ ಶಾಸಕರು ನಿರ್ದೇಶನ ನೀಡಿದರು. ಯಾವುದೇ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಗಮನ ಹರಿಸಿ ಎಂದು ಅವರು ಹೇಳಿದರು. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಐಟಿಡಿಬಿ, ಪಶುವೈದ್ಯ, ಆಹಾರ, ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡು ಅಗತ್ಯ ಮಾಹಿತಿ ಒದಗಿಸಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಡಿವೈಎಸ್ಪಿ ಮೋಹನ್ ಕುಮಾರ್, ಉಪ ವಿಭಾಗಧಿಕಾರಿ ಯತೀಶ್ ಉಲ್ಲಾಳ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net