

ಉಡುಪಿ: ಕಾಪು ತಾಲೂಕಿನ ಹೆಜಮಾಡಿಯಿಂದ ಬೈಂದೂರಿನ ಶಿರೂರುವರೆಗೆ ಕಡಲ ಕೊರೆತ ಸ್ಥಳಗಳನ್ನು ಗುರುತಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಕಡಲ ಕೊರೆತ ತಡೆಗಟ್ಟಲು 5 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತೆಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸಮುದ್ರದ ಏರಿಳಿತದಿಂದಾಗಿ ಕಡಲಕೊರೆತ ಉಂಟಾಗುತ್ತಿದೆ. ಕಡಲಕೊರೆತ ತಡೆಗೆ 10 ಕಡೆಗಳಲ್ಲಿ ಶಾಶ್ವತ ಕಾಮಗಾರಿ ಕೈಗೊಳ್ಳಲು 60 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿದ್ದು, ಇದನ್ನು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕೆಂದು ತಿಳಿಸಿದರು.
ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ
ಪ್ರವಾಸೋದ್ಯಮ ಹಾಗೂ ಕ್ರೀಡಾಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಬೇಕು. ಪ್ರಾಕೃತಿಕವಾಗಿ, ನೈಸರ್ಗಿಕವಾಗಿ ಸುಂದರ ತಾಣವಾಗಿದ್ದು, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ, ಹೆಚ್ಚು ಪ್ರವಾಸಿಗರು ಆಕರ್ಷಿಸುವಂತೆ ಮಾಡಬೇಕು. ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕಬೇಕು, ಪ್ರವಾಸಿ ತಾಣಗಳಲ್ಲಿ 18 ವರ್ಷ ಒಳಗಿನ ಮಕ್ಕಳು ಕೆಲಸ ನಿರ್ವಹಿಸದಂತೆ ನೋಡಿಕೊಳ್ಳಬೇಕು. ಪಿಪಿಪಿ ಮಾದರಿಯಲ್ಲಿ ಪ್ರವಾಸೋದ್ಯಮ ಹಾಗೂ ಕ್ರೀಡೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಲ್ಲಿ 10 ಕೋಟಿ ರೂ. ಅನುದಾನದವಿದ್ದು, ಅಗತ್ಯ ಕಾಮಗಾರಿಗಳ ಬಗ್ಗೆ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು.
ಮಲ್ಪೆ ಬಂದರು ನಿರ್ವಹಣೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಸಿಸಿಟಿವಿ ಅಳವಡಿಸಿ, ಭದ್ರತೆಯ ಜೊತೆಗೆ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಬಂದರು ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರೈತರಿಗೆ ಕಳಪೆ ಬೀಜ ಸರಬರಾಜು ಮಾಡಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿಗೆ ಸರಿಯಾಗಿ ಕೃಷಿ ಸಲಕರಣೆಗಳು ಸರಬರಾಜು ಆಗುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕು ಎಂದರು. ಸಾರ್ವಜನಿಕರು ಗೃಹ ನಿಮಾರ್ಣ ಕೈಗೊಳ್ಳಲು ಅಗತ್ಯವಿರುವ ಮರಳು, ಕಲ್ಲು, ಕೆಂಪು ಇಟ್ಟಿಗೆ ಸೂಕ್ತ ಬೆಲೆಗೆ ಸಿಗುವಂತೆ ಕ್ರಮವಹಿಸಬೇಕು. ಅನಧಿಕೃತವಾಗಿ ಮರಳು ಗಣಿಗಾರಿಕೆ, ಸಾಗಾಣಿಕೆ, ಮಾರಾಟಕ್ಕೆ ಪೂರ್ಣಪ್ರಮಾಣದಲ್ಲಿ ಕಡಿವಾಣ ಹಾಕಬೇಕು. ಕೆಂಪುಕಲ್ಲ್ಲು ಗಣಿಗಾರಿಕೆಗೆ ಗಣಿ ಇಲಾಖೆಯಿಂದ ಪರವಾನಿಗೆ ಲಭಿಸಿದ್ದರೂ ಅರಣ್ಯ ಇಲಾಖೆ ಹಸ್ತಕ್ಷೇಪದಿಂದ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಅನುಮತಿ ನೀಡಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪುವಂತೆ ಮಾಡಬೇಕು. ಹೆಚ್ಚು ಆದಾಯ ತರುವ ಹಣ್ಣುಗಳ ಬಗ್ಗೆ ಜನರಿಗೆ ಜಾಗೃತಿ ಮಾಡಿಸಬೇಕು. ಮುಂದಿನ ಸಭೆ ವೇಳೆ ಫೀಲ್ಡ್ ಗಿಳಿದು ಕೆಲಸ ಮಾಡಿದ ಬಗ್ಗೆ ಮಾಹಿತಿ ನೀಡಬೇಕು ಎಂದು ಸಚಿವೆ ಆದೇಶಿಸಿದರು.
ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಕಾಮಗಾರಿ ಆದ್ಯತೆ ಮೇಲೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಒಂದು ಮಗುವು ಶಾಲೆಯಿಂದ ಹೊರಗುಳಿಯದ ಹಾಗೆ ನೋಡಿಕೊಳ್ಳಬೇಕು. ಕೆಲವು ಖಾಸಗಿ ಶಾಲೆಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರು ಪ್ರತಿಶತ ಫಲಿತಾಂಶ ಬರಬೇಕೆಂಬ ಉದ್ದೇಶದಿಂದ ಒಂಭತ್ತನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡುತ್ತಿರುವುದು ಹಾಗೂ ಸರ್ಕಾರು ಶಾಲೆಗೆ ಸೇರಲು ವರ್ಗಾವಣೆ ಪತ್ರ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುವಂತೆ ತಿಳಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ರಾಜ್ಯದಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಹೆಚ್ಚು ನಡೆಯುತ್ತಿವೆ. ಆದರೆ, ವಸತಿ ಯೋಜನೆಯಲ್ಲಿ ಬರೀ 25 ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಇತರ ಜಿಲ್ಲೆಗಳಿಗೂ 25 ಮನೆಗಳನ್ನು ನೀಡಲಾಗುತ್ತಿದೆ. ಇವುಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.
ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಗ್ರಾಮ ಪಂಚಾಯಿತಿನಲ್ಲಿ ವಿತರಿಸುತ್ತಿದ್ದ 9/11 ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಿದ ನಂತರ ಏಕ ವಿನ್ಯಾಸ ನಕ್ಷೆಯ ಸಮಸ್ಯೆಗಳ ಬಗ್ಗೆ ದೂರುಗಳು ಬರುತ್ತಿದೆ. ಇದರಿಂದಾಗಿ ಗೃಹ ನಿಮಾರ್ಣ ಮತ್ತು ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಬಗೆಹರಿಸಬೇಕು ಎಂದರು.
ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳು ರಸ್ತೆಗೆ ಆವರಿಸಿದ್ದು, ಇದರಿಂದ ಸಾರ್ವಜನಿಕರು ಓಡಾಡಲು ಅನಾನುಕೂಲವಾಗಿದೆ ಹಾಗೂ ಕಾಡುಪ್ರಾಣಿಗಳ ಹಾವಳಿಗಳೂ ಸಹ ಆಗಿವೆ. ಕಳೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರೂ ಸಹ ಕ್ರಮವಾಗಿಲ್ಲ ಎಂದರು. ಅರಣ್ಯ ಇಲಾಖೆಯ ಅಧಿಕಾರಿಗಳು ಒಂದು ವಾರದ ಒಳಗಾಗಿ ಇವುಗಳ ತೆರವು ಕಾರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಮಾತನಾಡಿ, ಸರ್ಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಹೆಚ್ಚು ಪ್ರಚಾರ ನೀಡುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರ ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಶಾಸಕರುಗಳಾದ ವಿ. ಸುನೀಲ್ ಕುಮಾರ್ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ, ಡಿಎಫ್ಓ ಗಣಪತಿ, ವೈಲ್ಡ್ಲೈಫ್ ಡಿಎಫ್ಓ ಶಿವರಾಮ ಎಂ.ಬಾಬು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು.