

ಸುಳ್ಯ: ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಬರಹಗಾರ ಸುಳ್ಯದ ವೆಂಕಟರಾಮ ಭಟ್ಟ ಅವರಿಗೆ, ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ವತಿಯಿಂದ ಕೊಡಮಾಡುವ ಕೀರಿಕ್ಕಾಡು ವನಮಾಲ ಕೇಶವ ಸಾಧನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೀರಿಕ್ಕಾಡು ಮಾಸ್ತರ್ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಸ್ಮರಣಾರ್ಥ ನೀಡಲಾಗುವ ಈ ಪ್ರಶಸ್ತಿಯನ್ನು, ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭ ನಡೆಸಲಾದ ಕೀರಿಕ್ಕಾಡು ವನಮಾಲಾ ಕೇಶವ ಭಟ್ಟ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಸಂಘದ ಹಿರಿಯ ಕಲಾವಿದ, ಸಾಹಿತಿ ನಾರಾಯಣ ದೇಲಂಪಾಡಿ ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಸಾಹಿತ್ಯ ಕಲಾರಾಧನೆ, ಜೀವಭಾವಗಳನ್ನು ಸ್ಮರಿಸಿ ಸಂಸ್ಮರಣಾ ಭಾಷಣ ಮಾಡಿದರು. ಡಾ.ರಮಾನಂದ ಬನಾರಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಅಭಿನಂದನಾ ಭಾಷಣ ಮಾಡಿದರು. ರಾಮಣ್ಣ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮ ಬಳಿಕ ಶ್ರೀಕೃಷ್ಣ ಜನನ-ರಾಜಸೂಯಾಧ್ವರ ಯಕ್ಷಗಾನ ತಾಳಮದ್ದಳೆ ಜರುಗಿತು.