

ಯಳಂದೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಎಲ್ಲ ವರ್ಗದವರು ಜತೆಗೂಡಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಶಿವರಾಜ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಜೂ.24 ರಂದು ತಹಸೀಲ್ದಾರ್ ಕಚೇರಿ ಮುಂಭಾಗದ ಆವರಣದಲ್ಲಿ ವೇದಿಕೆ ಕಾಯಕ್ರಮ ಆಯೋಜಿಸಿ ಶಿಸ್ತುಬದ್ಧ, ಅರ್ಥಪೂರ್ಣವಾಗಿ ಆಚರಿಸಲು ಒಕ್ಕಲಿಗ ಸಂಘ, ಸಂಸ್ಥೆಗಳು ಸೇರಿದಂತೆ ಪ್ರಗತಿಪರ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡುಬೇಕಾಗಿದೆ.
ಸಮುದಾಯದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಸಹಾಯಧನ ನೀಡಿ ಗೌರವಿಸುವುದು, ಜತೆಗೆ ತಾಲೂಕಿನ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರದ ಜತೆಗೆ ಕಡ್ಡಾಯವಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಿಸಬೇಕು. ಮುಖ್ಯ ಅತಿಥಿಗಳು ಸೇರಿದಂತೆ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಪಂಚಾಯಿತಿ ಇಒ ಉಮೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರವಿಕೀರ್ತಿ, ಬಿಇಒ ಕಾಂತರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಮೃತೇಶ್, ಜಿಪಂ ಎಇಇ ಹರೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ಮಂಜುನಾಥ್, ವೈದ್ಯಾಧಿಕಾರಿ ಡಾ.ಶ್ರೀಧರ್, ಯರಗಂಬಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಸಿ.ಬಾಬು, ಪಪಂ ಮಾಜಿ ಸದಸ್ಯ ಉಮೇಶ್ ಸೇರಿದಂತೆ ಒಕ್ಕಲಿಗ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.