

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೂ. 27 ರಂದು ದೇವನಹಳ್ಳಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೆಂಪೇಗೌಡ ಜಯಂತಿ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದೇವನಹಳ್ಳಿಯ ಶ್ರೀ ವೇಣು ಗೋಪಾಲಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೆ ಕಲಾತಂಡಗಳ ಮೆರವಣಿಗೆಯೊಂದಿಗೆ ಕೆಂಪೇಗೌಡ ಭಾವಚಿತ್ರ ಹೊತ್ತ ರಥ ಸಂಚರಿಸಲಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳು, ಜೀವನ ಚರಿತ್ರೆ ಕುರಿತ ಉಪನ್ಯಾಸ ನಡೆಯಲಿದೆ ಎಂದು ತಿಳಿಸಿದರು.
ಶಿಷ್ಟಾಚಾರದಂತೆ ಉಸ್ತುವಾರಿ ಸಚಿವರು ಸೇರಿ ಇತರೆ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿಅಗತ್ಯ ಸೌಲಭ್ಯಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾ ತಂಡಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಹಾಗೂ ದೇವನಹಳ್ಳಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಜಿಲ್ಲೆಯ ರೈತ ಬಾಂಧವರು, ಸಂಘ-ಸಂಸ್ಥೆಗಳ, ಸಮುದಾಯದ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.