

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಜೂ.27ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಿಜೃಂಭಣೆಯಿಂದ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ಸಂಬಂಧ ಅಧಿಕಾರಿಗಳು ಹಾಗೂ ಸಂಘ, ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಂಪೇಗೌಡ ಅವರ ಕೊಡುಗೆ, ಸಾಧನೆ ಅಪಾರ. ಅವರ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗುವುದು. ಸಂಘ, ಸಂಸ್ಥೆಗಳ ಮುಖ್ಯಸ್ಥರು ಹೆಚ್ಚಿನ ಜನರನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಿಸಬೇಕು ಎಂದರು.
ಅಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಯಲಿದೆ. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರುಗು ನೀಡಲಿದ್ದಾರೆ. ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲೆಯ ಎಲ್ಲ ಶಾಲಾ ಮತ್ತು ಕಾಲೇಜಿನಲ್ಲಿ 27ರಂದು ನಾಡಪ್ರಭು ಕೆಂಪೇಗೌಡರ ಕೊಡುಗೆಗಳ ಬಗ್ಗೆ ಮಕ್ಕಳಿಗೆ ತಿಳಿಸುವುದರ ಮೂಲಕ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಕೃಷಿ, ಸಾಹಿತ್ಯ ಸೇರಿದಂತೆ ಒಟ್ಟು ಐದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಗುರುತಿಸಿ ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆಯಾಗಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯ ಮುದ್ರಣ ಹಾಗೂ ವಿತರಣೆಯ ಕೆಲಸವಾಗಬೇಕು ಎಂದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ನಗರಸಭೆ ಆಯುಕ್ತ ಆರ್.ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ಡಿಡಿಪಿಯು ಸಿ.ಚೆಲುವಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ರಾಜಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಡಾ.ಮೀರಾ ಶಿವಲಿಂಗಯ್ಯ, ತಗ್ಗಹಳ್ಳಿ ವೆಂಕಟೇಶ್, ಅಶೋಕ್, ಸುಜಾತಾಕೃಷ್ಣ, ಚಂದ್ರಶೇಖರ್, ಕೃಷ್ಣ, ಶಿವಕುಮಾರ್, ಸೌಭಾಗ್ಯಾ, ರವೀಂದ್ರ, ಕಾರಸವಾಡಿ ಮಹದೇವ ಇತರರಿದ್ದರು.