ಕೆಂಪೇಗೌಡ ಉದ್ಯಾನ ಅಭಿವೃದ್ಧಿಗೆ ಕ್ರಮ: ಶಾಸಕ ರವಿಕುಮಾರ್ ಗಣಿಗ ಭರವಸೆ

Kempegowda Jayanti pre meeting Mandya
Published on

ಮಂಡ್ಯ: ನಗರದಲ್ಲಿರುವ ಉದ್ಯಾನಗಳ ಅಭಿವೃದ್ಧಿಗೆ ಸರ್ಕಾರದಿಂದ 10 ಕೋಟಿ ರೂ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಬಿಡುಗಡೆಯಾಗಿರುವ ಅನುದಾನದಲ್ಲಿ ಉದ್ಯಾನ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಒಟ್ಟಿಗೆ ಸೇರಿ ಚರ್ಚಿಸಿ ಪ್ರತಿಮೆ ನಿರ್ಮಾಣ ಕುರಿತು ತೀರ್ಮಾನಿಸೋಣ ಎಂದರು.

ಜೂ.30ರಂದು ರಜೆ ದಿನ. ಅಂದು ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಜೂ.27ರ ಬದಲಿಗೆ 30ರಂದು ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡೋಣ. ಈ ಹಿಂದೆ ಕೆಂಪೇಗೌಡ ಜಯಂತಿ ಆಚರಣೆಗೆ ಪ್ರತಿ ತಾಲೂಕಿಗೂ 50 ಸಾವಿರ ರೂ ಅನುದಾನ ನೀಡಲಾಗುತ್ತಿತ್ತು. ಆದರೆ ಈ ಬಾರಿ ಈ ಬಾರಿ ವಿಜೃಂಭಣೆಯಿಂದ ಜಯಂತಿ ಆಚರಿಸಲು ಪ್ರತಿ ತಾಲೂಕಿಗೆ ಒಂದು ಲಕ್ಷ ರೂ ಅನುದಾನವನ್ನು ಸಿಎಂ ಮತ್ತು ಡಿಸಿಎಂ ನೀಡಿದ್ದಾರೆ ಎಂದು ವಿವರಿಸಿದರು.

ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಸಂಘ ಸಂಸ್ಥೆಗಳ ಮುಖ್ಯಸ್ಥರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಿಸಬೇಕು. ಸಂಜೆ 6 ಗಂಟೆಯಿಂದ ಖ್ಯಾತ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು. ಇದರೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲಾಗುವುದು. ಹೆಚ್ಚು ಜನ ಭಾಗವಹಿಸಲು ಹಾಗೂ ಸಂಪನ್ಮೂಲಗಳ ಕ್ರೋಡೀಕರಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಅಂತೆಯೇ ಕೆಂಪೇಗೌಡರ ಜಯಂತಿ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net