

ಮೈಸೂರು: ನಗರದ ವೃತ್ತವೊಂದರಲ್ಲಿ ರಾತ್ರೋರಾತ್ರಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಸಿದ್ದಾರ್ಥ ಬಡಾವಣೆಯಲ್ಲಿ ತಿ.ನರಸೀಪುರ ಹಾಗೂ ಲಲಿತಮಹಲ್ ರಸ್ತೆ ಸೇರುವ ಕೆಂಪೇಗೌಡ ವೃತ್ತದಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಅನುಮತಿ ಪಡೆಯದೆ ಪ್ರತಿಮೆ ನಿರ್ಮಿಸಲಾಗಿದೆ ಎಂದು ಪೊಲೀಸರು ಅದನ್ನು ಶನಿವಾರ ಬೆಳಗ್ಗೆ ತೆರವು ಮಾಡಲು ಮುಂದಾದರು. ಆದರೆ ಸ್ಥಳದಲ್ಲಿದ್ದ ಕೆಂಪೇಗೌಡ ಅವರ ಅಭಿಮಾನಿಗಳು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಅಭಿಮಾನಿಗಳ ನಡುವೆ ವಾಗ್ವಾದ ನಡೆದು ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.
ನಗರಪಾಲಿಕೆಯಿಂದ ಅನುಮತಿ ಪಡೆಯದೇ ಏಕಾಏಕಿ ಪ್ರತಿಮೆ ಇರಿಸಿರುವುದು ಸರಿಯಲ್ಲ. ಹಾಗಾಗಿ ಪ್ರತಿಮೆ ತೆರವುಗೊಳಿಸುವಂತೆ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೆಂಪೇಗೌಡ ಅಭಿಮಾನಿಗಳು, ಮೂರು ತಿಂಗಳ ಹಿಂದೆಯೇ ಇಲ್ಲಿ ಪ್ರತಿಮೆ ಪ್ರತಿಷ್ಠಾಪಿಸಲಾಗಿದ್ದು, ಯಾವುದೇ ಕಾರಣಕ್ಕೂ ತೆರವು ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಹಲವು ವರ್ಷಗಳ ವಿವಾದ:
ಕೆಂಪೇಗೌಡ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಪ್ರತಿಷ್ಠಾಪನೆಗೆ ಒಕ್ಕಲಿಗರ ಸಂಘ, ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬಂದಿತ್ತು. ಜತೆಗೆ ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಸಹ ನಡೆದಿತ್ತು. ಆದರೆ ಶುಕ್ರವಾರ ಮಧ್ಯರಾತ್ರಿ 2 ಗಂಟೆ ಹೊತ್ತಿನಲ್ಲಿ ಪ್ರತಿಮೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
ಶಾಸಕ ಹರೀಶ್‌ಗೌಡ ಸ್ಥಳಕ್ಕೆ ಭೇಟಿ ನೀಡಿ ಪ್ರತಿಮೆ ನಿರ್ಮಾಣಕ್ಕೆ ನಗರಪಾಲಿಕೆಯಿಂದ ಅನುಮತಿ ಪಡೆಯಬೇಕು. ಹಾಗಾಗಿ ನಗರಪಾಲಿಕೆಯಲ್ಲಿ ಅನುಮತಿ ಪಡೆದು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು. ಅಲ್ಲಿಯವರೆಗೆ ಯಾವುದೇ ಗಲಭೆಗೂ ಅವಕಾಶ ನೀಡದೆ ಸಹಕರಿಸಬೇಕು. ಈಗ ಪ್ರತಿಷ್ಠಾಪಿಸಿರುವ ಪ್ರತಿಮೆಯನ್ನು ಹೀಗಿರುವಂತೆಯೇ ಕಾಯ್ದುಕೊಳ್ಳಬೇಕು ಎಂದು ಪೊಲೀಸರಿಗೆ ತಿಳಿಸಿದರು.
ಬಳಿಕ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ವಾಪಸ್ ಪಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.