

ಜಯಂತ್ಯುತ್ಸವ ಸಮಿತಿ ಅಧ್ಯಕ್ಷೆ ಸುಪ್ರಿಯಾ ಚಂದ್ರಯ್ಯ ಹೇಳಿಕೆ
* ಪುಣ್ಯ ಪುರುಷನ ಜನ್ಮಭೂಮಿ ನಮ್ಮದು ಎನ್ನುವುದೇ ಹೆಮ್ಮೆ ಎಂದ ಗಣ್ಯರು
ರಾಮನಗರ
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾ ಕೇಂದ್ರ ರಾಮನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಸಮಿತಿ, ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರೆ ಅದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಶ್ರೀ ಆದಿಚುಂಚನಗಿರಿ ಶಾಖಾಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಸಂಸದ ಡಾ.ಸಿ.ಎನ್.ಮಂಜುನಾಥ್ ಸೇರಿ ಹಲವು ಗಣ್ಯರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಬೆಳ್ಳಿ ರಥದಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ನಗರದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಈ ವೇಳೆ ಶಾಸಕ ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಎಡಿಸಿ ಆರ್.ಚಂದ್ರಯ್ಯ, ಎಸಿ ಬಿನೋಯ್ ಇದ್ದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ಅಧ್ಯಕ್ಷೆ ಸುಪ್ರಿಯಾ ಚಂದ್ರಯ್ಯ, ಕೆಂಪೇಗೌಡರು ರೈತರ ಮಗ, ಬೆಂಗಳೂರು ನಿರ್ಮಾತೃ. ಕೆಂಪೇಗೌಡರು ಸಾವನದುರ್ಗ ಹಾಗೂ ಮಾಗಡಿ ಕೋಟೆಗಳನ್ನು ನಿರ್ಮಾಣ ಮಾಡಿಕೊಂಡು ತಾವು ನಿರ್ಮಿಸಿದ್ದ ಪ್ರದೇಶವನ್ನು ಭದ್ರಗೊಳಿಸಿದ್ದರು. ಅವರದ್ದೇ ಸೈನ್ಯವನ್ನು ಕಟ್ಟಿಕೊಂಡಿದ್ದವರು. ಸಾರ್ವಜನಿಕರಿಗೆ ಹಾಗೂ ಪಶು ಪಕ್ಷಿಗಳಿಗೆ ಅನುಕೂಲವಾಗುವಂತೆ ಕೆರೆ, ಕಟ್ಟೆಗಳನ್ನು ನಿರ್ಮಾಣ ಮಾಡಿದರು. ಬೆಂಗಳೂರಿಗೆ ನೀರಿನ ವ್ಯವಸ್ಥೆ ಸೇರಿ ಅನೇಕ ಮೂಲ ಸೌಕರ್ಯಗಳನ್ನು ಒದಗಿಸಿದರು. ಇಂತಹ ಪುಣ್ಯ ಪುರುಷರಿಗೆ ಜನ್ಮ ನೀಡಿದ ಭೂಮಿ ನಮ್ಮದು ಎನ್ನುವುದು ನಮ್ಮೆಲ್ಲರ ಹೆಮ್ಮೆ ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಸನ್ ರಘು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಸಮುದಾಯದ ಮುಖಂಡರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಸಮುದಾಯದ ಮುಖಂಡರಾದ ರವಿ, ಕೃಷ್ಣೇಗೌಡ, ಬೈರೇಗೌಡ, ಕಿರಣ್, ಜಯಮ್ಮ, ಪಾರ್ವತಮ್ಮ, ಸಬ್ಬಕೆರೆ ಶಿವಲಿಂಗಪ್ಪ, ಡಾ.ಭರತ್, ಕೆಂಪಣ್ಣ, ಶಿವಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸತೀಶ್ ಮುಂತಾದವರು ಇದ್ದರು.