

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು ೫೨೫ ಹಳ್ಳಿಗಳಲ್ಲಿ ೨,೯೦,೯೭೨ ಸರ್ವೆ ನಂಬರ್‌ಗಳಿದ್ದು, ಈ ಸರ್ವೆ ನಂಬರ್‌ಗಳ ಪೈಕಿ ೨,೬೦,೬೧೦ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಾಗಿದೆ. ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಾದ್ಯಂತ ಸೆ೧ ರಿಂದ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು "Farmer Crop Survey App-2022-23" ಎಂಬ ಹೆಸರಿನ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆ್ಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೩೫೩ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದರು.
ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆರ್ಥಿಕ ವರ್ಷ ಹಾಗೂ ಋತು ದಾಖಲಿಸಬೇಕು. ರೈತರ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿ ರೈತರು ತಮ್ಮ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈತರ ಆಧಾರ್ ಕಾರ್ಡ್‌ನ್ನು ಸ್ಕ್ಯಾನ್ ಮಾಡುವುದು, ಸ್ಕ್ಯಾನ್ ಆಗದೇ ಇದ್ದಲ್ಲಿ ನಿಗದಿತ ನಮೂನೆಯಂತೆ ವಿವರ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಮೊದಲು ಮಾಸ್ಟರ್ ವಿವರ, ಪಹಣಿ ವಿವರ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿಐಎಸ್. ಮ್ಯಾಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆಪ್‌ಗೆ ಸೇರಿಸಿಕೊಳ್ಳಬೇಕು ಹಾಗೂ ಹಿಸ್ಸಾ ಇದ್ದರೆ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಈ ಸಂದರ್ಭ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬನಾ ಎಂ.ಶೇಖ್ ಮಾತನಾಡಿ, ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ ೭೮೪೮೯೧೪೯೧೫, ತಮ್ಮ ಗ್ರಾಮದ ಖಾಸಗಿ ನಿವಾಸಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಶಿವಕುಮಾರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ತಹಶೀಲ್ದಾರ್ ಮಹೇಶ್, ಗೋವಿಂದರಾಜು, ಅರ್ಚನ, ಪ್ರಶಾಂತ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗೌರಿ, ಭೂದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಇತರರು ಇದ್ದರು.