

ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಯೊಂದಿಗೆ ಕ್ಯಾನ್ಸರ್ ಕಾಯಿಲೆಗೆ ಉಚಿತ ಹಾಗೂ ಅತೀ ಕಡಿಮೆ ದರದಲ್ಲಿ ಚಿಕಿತ್ಸೆ ಒದಗಿಸುತ್ತಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಒಂದು ಸಾವಿರ ರೋಗಿಗಳಿಗೆ ಯಶಸ್ವಿಯಾಗಿ ರೋಬಾಟಿಕ್ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ.
ರೋಬಾಟಿಕ್ ಯಂತ್ರವನ್ನು ಮೊದಲ ಬಾರಿಗೆ ಅಳವಡಿಕೆ ಮಾಡಿಕೊಂಡ ರಾಜ್ಯದ ಏಕೈಕ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಸ್ಥೆಯು, ಕಳೆದ 9 ವರ್ಷಗಳಲ್ಲಿ ಈ ಸಾಧನೆ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಶ್ಲಾಸಿದ್ದಾರೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅತ್ಯಧಿಕ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ರೋಬಾಟಿಕ್ ಶಸ್ತ್ರಚಿಕಿತ್ಸೆ ಸೇರಿ ಎಲ್ಲ ರೀತಿಯ ಚಿಕಿತ್ಸೆಯನ್ನು ಬಡ ರೋಗಿಗಳಿಗೆ ಸಂಪೂರ್ಣ ಉಚಿತ ಹಾಗೂ ಇತರರಿಗೆ ರಿಯಾಯಿರಿ ದರದಲ್ಲಿ ಒದಗಿಸಲಾಗುತ್ತಿದೆ. ಇದಲ್ಲದೆ ಅಸ್ತಿಮಜ್ಜೆ ಕಸಿ ಚಿಕಿತ್ಸಾ ಕೇಂದ್ರ (ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಕ್ ಸೆಂಟರ್) ಹೊಂದಿರುವ ರಾಜ್ಯದ ಏಕೈಕ ಸರ್ಕಾರಿ ಆಸ್ಪತ್ರೆಯಾಗಿದೆ. ಇದುವರೆಗೂ ನೂರಕ್ಕೂ ಅಧಿಕ ರೋಗಿಗಳಿಗೆ ಉಚಿತವಾಗಿ ಅಸ್ತಿಮಜ್ಜೆ ಕಸಿ ನಡೆಸಿದೆ.
ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಅನುಕೂಲವಾಗುವಂತೆ ಆವರಣದಲ್ಲಿರುವ ಕೆಸಿಡಿಎಫ್ ಔಷಧ ಮಳಿಗೆಯಲ್ಲಿ ರಿಯಾಯಿತಿ ದರದಲ್ಲಿ ಕ್ಯಾನ್ಸರ್ ಕಾಯಿಲೆಗೆ ಸಂಬಂಧಿಸಿದ ಔಷಧಗಳು ಲಭ್ಯವಿವೆ. ಇದಲ್ಲದೆ ಕೆಎಸ್‌ಆರ್‌ಟಿಸಿ ನೌಕರರಿಗೆ ಕ್ಯಾಷ್‌ಲೆಸ್ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿರದ ಆರ್ಥಿಕವಾಗಿ ತೀವ್ರ ಸಮಸ್ಯೆಯಲ್ಲಿರುವ ಕುಟುಂಬದ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಸುಸಜ್ಜಿತ ಕಟ್ಟಡಗಳು ಸೇರಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೈಕೆ ನೀಡುತ್ತಿದೆ ಎಂದು ಸಂಸ್ಥೆ ಕಾರ್ಯಕ್ಕೆ ಸಚಿವರು ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.